August 17, 2026
Monday, August 17, 2026
spot_img

WEATHER | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ, ಒಳನಾಡಿನಲ್ಲಿ ತಂಪೆರೆೆಯಲಿದೆ ಹಿತಕರ ಮಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಾದ್ಯಂತ ಪ್ರಸ್ತುತ ಮುಂಗಾರು ಮಳೆಯ ವಾತಾವರಣ ಸಕ್ರಿಯವಾಗಿದ್ದು, ಆಗಸ್ಟ್ 17 ಮತ್ತು 18 ರಂದು ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಾಯವ್ಯ ಬಂಗಾಳ ಕೊಲ್ಲಿ ಹಾಗೂ ಪಶ್ಚಿಮ ಬಂಗಾಳ-ಉತ್ತರ ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸಮುದ್ರಮಟ್ಟದಿಂದ ಸುಮಾರು 7.6 ಕಿ.ಮೀ ಎತ್ತರದವರೆಗೆ ವ್ಯಾಪಿಸಿದ್ದು, ನೈಋತ್ಯ ದಿಕ್ಕಿಗೆ ಚಲಿಸುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಇದು ಮತ್ತಷ್ಟು ಪ್ರಬಲಗೊಳ್ಳಲಿದ್ದು, ರಾಜ್ಯದಾದ್ಯಂತ ಉತ್ತಮ ವಾತಾವರಣ ನಿರ್ಮಾಣವಾಗಲಿದೆ.

ಎಲ್ಲೆಲ್ಲಿ ಮಳೆಯ ನಿರೀಕ್ಷೆ?

  • ಕರಾವಳಿ ಕರ್ನಾಟಕ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.
  • ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದೆ.
  • ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ.

ಆಗಸ್ಟ್ 18: ವಿಸ್ತರಿಸಲಿರುವ ಮಳೆ ಮುನ್ಸೂಚನೆ

ಆಗಸ್ಟ್ 18 ರಂದು ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಇದರೊಂದಿಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಹಿತಕರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರೈತರಿಗೆ ಮತ್ತು ಕೆರೆ-ಕಟ್ಟೆಗಳಿಗೆ ವರದಾನ

ಕಳೆದ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಮುಂಗಾರು ಮಳೆ ಸಾಮಾನ್ಯವಾಗಿದ್ದು, ಉಡುಪಿಯ ಕೊಲ್ಲೂರು ಹಾಗೂ ಉತ್ತರ ಕನ್ನಡದ ನೀಲ್ಕುಂದದಲ್ಲಿ ತಲಾ 5 ಸೆಂ.ಮೀ ಮಳೆ ದಾಖಲಾಗಿದೆ. ಶಿವಮೊಗ್ಗದ ಆಗುಂಬೆಯಲ್ಲೂ ಉತ್ತಮ ಮಳೆಯಾಗಿದೆ. ಈ ಮಳೆಯು ಕೃಷಿ ಚಟುವಟಿಕೆಗಳಿಗೆ, ಬಿತ್ತನೆ ಕಾರ್ಯಕ್ಕೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ಅತ್ಯಂತ ಪೂರಕವಾಗಿದ್ದು, ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ಹೆಚ್ಚಲು ಸಹಾಯ ಮಾಡಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !