ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹಿಂಗಾರು ಮಳೆ ಸಂಪೂರ್ಣವಾಗಿ ಚುರುಕುಗೊಂಡಿದ್ದು, ಮುಂದಿನ ೨೪ ರಿಂದ ೪೮ ಗಂಟೆಗಳ ಕಾಲ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಗೆ ಹೈ ಅಲರ್ಟ್
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರದಲ್ಲಿ ಗಾಳಿಯ ವೇಗ ಗಂಟೆಗೆ 35 ರಿಂದ 45 ಕಿ.ಮೀ ತಲುಪುವ ನಿರೀಕ್ಷೆಯಿರುವುದರಿಂದ ಅಲೆಗಳ ಅಬ್ಬರ ಹೆಚ್ಚಾಗಲಿದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಜಾಗರೂಕರಾಗಿರಲು ಹವಾಮಾನ ಇಲಾಖೆ ಎಚ್ಚರಿಸಿದೆ.
ಗುಡುಗು-ಮಿಂಚಿನ ಆರ್ಭಟ
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಭಾಗಗಳಲ್ಲಿ ತಂಪು ವಾತಾವರಣದೊಂದಿಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ಸಾಧಾರಣ ಮಳೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಮಧ್ಯಾಹ್ನದ ನಂತರ ಅಥವಾ ಸಂಜೆ ವೇಳೆ ಸಾಧಾರಣ ಮಳೆಯಾಗಬಹುದು. ಇದಲ್ಲದೆ ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಮಿಶ್ರ ಹವಾಮಾನ
ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಹಗುರ ಮಳೆಯಾಗಬಹುದು. ಆದರೆ, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ಬಿಸಿಲಿನ ತಾಪಮಾನದಲ್ಲಿ ಕೊಂಚ ಏರಿಕೆಯಾಗಲಿದೆ.



