ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 5 ಹಾಗೂ 6ರಂದು ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಸ್ಥಿತಿ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಗಸ್ಟ್ 5 ಮತ್ತು 6ರಂದು ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಭಾಗದಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಸೂಚಿಸಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಹೇಗಿರಲಿದೆ ವಾತಾವರಣ?
ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಹಗುರ ಮಳೆಯಾಗುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ರಾಮನಗರ, ತುಮಕೂರು, ದಾವಣಗೆರೆ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಕೃಷಿ ಮತ್ತು ಜಲಮೂಲಗಳಿಗೆ ಪೂರಕವಾದ ಮುಂಗಾರು
ಈ ಬಾರಿಯ ಮಳೆಯು ರಾಜ್ಯದ ನದಿ, ಕೆರೆ-ಕಟ್ಟೆಗಳು ಹಾಗೂ ಜಲಾಶಯಗಳ ನೀರು ಹೆಚ್ಚಾಗಲು ಅತ್ಯಂತ ಪೂರಕವಾಗಿದೆ. ಇದರಿಂದ ರೈತರ ಕೃಷಿ ಚಟುವಟಿಕೆಗಳಿಗೆ ಜೀವಕಳೆ ಬಂದಿದ್ದು, ಕುಡಿಯುವ ನೀರಿನ ಅಭಾವ ತಪಿಸುವ ನಿರೀಕ್ಷೆಯಿದೆ. ಭೂಗರ್ಭದ ನೀರಿನ ಮಟ್ಟವೂ ಹೆಚ್ಚುತ್ತಿದ್ದು, ಕೃಷಿ ಕ್ಷೇತ್ರಕ್ಕೆ ಇದು ಉತ್ತಮ ಹಾಗೂ ಆಶಾದಾಯಕ ಬೆಳವಣಿಗೆಯಾಗಿದೆ.
ಕರಾವಳಿ ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ನೆರೆ, ಪ್ರವಾಹ ಭೀತಿ ಎದುರಾಗಿದೆ. ಎಲ್ಲೆಡೆ ಜಿಲ್ಲಾಡಳಿತ ತೀವ್ರ ನಿಗಾ ಇರಿಸಿದ್ದು, ಯಾವುದೇ ಪ್ರಾಕೃತಿಕ ವಿಕೋಪ ತಲೆದೋರಿದಲ್ಲಿ ಅವುಗಳನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧವಾಗಿದೆ.



