ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯಾದ್ಯಂತ ಬಿರುಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಬಲವಾದ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಕರಾವಳಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹಾಗೂ ಕರಾವಳಿ ನಿವಾಸಿಗಳಿಗೆ ಜಾಗರೂಕರಾಗಿರಲು ತಿಳಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳ ಹವಾಮಾನ ವರದಿ
ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದಲ್ಲಿ ಮಳೆ
ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು, ಕೋಲಾರ, ತುಮಕೂರು, ದಾವಣಗೆರೆ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.
ಕೃಷಿ ಕ್ಷೇತ್ರಕ್ಕೆ ಲಭಿಸಿದ ಮಳೆಯ ಆಸರೆ
ಈ ಸಮಯದ ಮಳೆಯು ರಾಜ್ಯದ ರೈತಾಪಿ ವರ್ಗಕ್ಕೆ ಹೊಸ ಭರವಸೆಯನ್ನು ನೀಡಿದೆ. ಕೃಷಿ ಚಟುವಟಿಕೆಗಳು ವೇಗ ಪಡೆದುಕೊಳ್ಳಲು ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಾಗಲು ಈ ಮಳೆ ಬಹಳ ಸಹಕಾರಿಯಾಗಿದೆ. ವಾತಾವರಣದಲ್ಲಿ ತಂಪು ಮೂಡಿದ್ದು, ಕೃಷಿ ಭೂಮಿಗೆ ಸೂಕ್ತ ತೇವಾಂಶ ಲಭಿಸಲಿದೆ. ಸಾರ್ವಜನಿಕರು ಹಾಗೂ ಮೀನುಗಾರರು ಸೂಕ್ತ ಮುನ್ನೆಚ್ಚರಿಕೆ ವಹಿಸಿವುದು ಸೂಕ್ತ.



