ರಾಜ್ಯದಾದ್ಯಂತ, ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಶೀತ ಗಾಳಿಯ ಪ್ರಭಾವ ಹೆಚ್ಚಾಗಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಕರ್ನಾಟಕದಲ್ಲಿ ಚಳಿಯ ಪ್ರಮಾಣ ತೀವ್ರಗೊಂಡಿದ್ದು, ವಿಜಯಪುರದಲ್ಲಿ ಕಳೆದ 20 ವರ್ಷಗಳಲ್ಲಿ ಮೂರನೇ ಬಾರಿಗೆ ಅತಿ ಕಡಿಮೆ ತಾಪಮಾನ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಜನರು ಬೆಚ್ಚಗಿನ ಉಡುಪುಗಳನ್ನು ಧರಿಸಬೇಕು, ಬಿಸಿ ನೀರನ್ನು ಬಳಸಬೇಕು ಹಾಗೂ ಅತಿಯಾದ ಚಳಿಯಿರುವ ಮುಂಜಾನೆ ಮತ್ತು ಸಂಜೆ ವಾಕಿಂಗ್‌ಗೆ ತೆರಳುವುದನ್ನು ತಪ್ಪಿಸಬೇಕು ಎಂದು ಸಲಹೆ ನೀಡಿದ್ದಾರೆ.
ಹವಾಮಾನ ಇಲಾಖೆಯ ಪ್ರಕಾರ, ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಒಣಹವೆಯ ವಾತಾವರಣವು ಇಂದೂ ಮುಂದುವರಿಯಲಿದೆ.
ಇದೇ ರೀತಿ, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಹ ಒಣ ಹವೆಯ ವಾತಾವರಣ ಇರಲಿದೆ.

