ರಾಜ್ಯಾದ್ಯಂತ ವರುಣನ ಅಬ್ಬರ ಶುರುವಾಗಲಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗಲಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮಿಂಚು-ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಆದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಶುಷ್ಕ ವಾತಾವರಣ ಮುಂದುವರಿಯಲಿದೆ.
ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ತಲುಪುವ ಸಾಧ್ಯತೆಯಿದ್ದು, ಇಲ್ಲಿಯೂ ಮಳೆ ಅಬ್ಬರಿಸಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿರಲಿದ್ದು, ನಗರದಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಳೆಯಿಂದಾಗಿ ನಗರದ ತಾಪಮಾನದಲ್ಲಿ ಇಳಿಕೆಯಾಗುವ ನಿರೀಕ್ಷೆಯಿದ್ದು, ವಾಹನ ಸವಾರರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.



