October 5, 2026
Monday, October 5, 2026
spot_img

WEATHER | ಮತ್ತೆ ಶುರುವಾಯ್ತು ವರುಣನ ಆರ್ಭಟ: ಕರಾವಳಿ, ಮಲೆನಾಡಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ರಮಿಸಿಕೊಂಡಿದ್ದ ಮುಂಗಾರು ಮಳೆ ರಾಜ್ಯದಲ್ಲಿ ಮತ್ತೆ ಸಕ್ರಿಯಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದ್ದು, ಗುಡುಗು-ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ.

‘ಯೆಲ್ಲೋ ಅಲರ್ಟ್’!

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯ ಗುಡ್ಡಗಾಡು ಪ್ರದೇಶಗಳಲ್ಲಿ ಸಿಡಿಲಿನೊಂದಿಗೆ ಮಳೆ ಬೀಳಲಿದ್ದು, ಉತ್ತರ ಕನ್ನಡದಲ್ಲಿಯೂ ಉತ್ತಮ ಮಳೆಯಾಗಲಿದೆ. ಇನ್ನು ಮಲೆನಾಡು ಭಾಗಗಳಾದ ಶಿವಮೊಗ್ಗ, ಚಾಮರಾಜನಗರ, ಮೈಸೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಒಣ ಹವೆ

ಉತ್ತರ ಒಳನಾಡಿನ ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ಬೆಳಗಾವಿ, ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬಹುತೇಕ ಒಣ ಹವೆಯೇ ಮುಂದುವರಿಯಲಿದೆ.

ಇತರ ಜಿಲ್ಲೆಗಳ ಸ್ಥಿತಿ ಏನು?

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ವಿಜಯನಗರ, ದಾವಣಗೆರೆ, ಬಳ್ಳಾರಿ ಹಾಗೂ ಚಿತ್ರದುರ್ಗ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಗುಡ್ಡಗಾಡು ಹಾಗೂ ತಗ್ಗು ಪ್ರದೇಶಗಳಲ್ಲಿರುವ ಜನರು ಜಾಗರೂಕರಾಗಿರಲು ಕೋರಲಾಗಿದೆ.

Must Read