November 14, 2026
Saturday, November 14, 2026
spot_img

WEATHER | ರಾಜ್ಯದಲ್ಲಿ ಮಳೆಗೆ ಬಿಡುವು: ಮುಂಜಾನೆ-ರಾತ್ರಿ ಹೆಚ್ಚಾಗಲಿದೆ ಚಳಿಯ ಅಬ್ಬರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರುನಾಡಿನಾದ್ಯಂತ ವರುಣ ದೇವ ಸಂಪೂರ್ಣ ಬಿಡುವು ಪಡೆದುಕೊಂಡಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿದಿದೆ. ಹವಾಮಾನ ಇಲಾಖೆಯ ಮಾಹಿತಿಯಂತೆ, ಸದ್ಯಕ್ಕೆ ರಾಜ್ಯದ ಯಾವುದೇ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆ ಇಲ್ಲ. ಇದರ ಪರಿಣಾಮವಾಗಿ ಹಗಲಿನಲ್ಲಿ ಬಿಸಿಲಿನ ಝಳ ಕಂಡುಬಂದರೆ, ರಾತ್ರಿ ಹಾಗೂ ಮುಂಜಾನೆಯ ವೇಳೆ ಚಳಿಯ ತೀವ್ರತೆ ನಿಧಾನವಾಗಿ ಹೆಚ್ಚಾಗುತ್ತದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ. ಇತ್ತ ಉತ್ತರ ಒಳನಾಡಿನಲ್ಲೂ ಮಳೆಯ ಸುಳಿವಿಲ್ಲ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಮುಂಜಾನೆಯ ವೇಳೆ ತಂಪಾದ ಗಾಳಿ ಬೀಸುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನಲ್ಲೂ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಯಿಲ್ಲ. ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಮಲೆನಾಡು ಮತ್ತು ಬಯಲು ಸೀಮೆಯ ಜಿಲ್ಲೆಗಳಲ್ಲಿ ಬೆಳಗಿನ ಜಾವ ಮಂಜು ಕವಿದ ವಾತಾವರಣ ಕಂಡುಬರುತ್ತದೆ.

ಒಟ್ಟಾರೆಯಾಗಿ ರಾಜ್ಯಾದ್ಯಂತ ಒಣಹವೆ ಮುಂದುವರಿಯುತ್ತಿರುವುದರಿಂದ ಬೆಳಗ್ಗೆ ಮತ್ತು ರಾತ್ರಿ ವೇಳೆಯಲ್ಲಿ ಚಳಿಯ ಅನುಭವ ಹೆಚ್ಚಾಗಲಿದೆ. ಹೀಗಾಗಿ, ವಿಶೇಷವಾಗಿ ಮಕ್ಕಳು ಮತ್ತು ವೃದ್ಧರು ಬೆಚ್ಚಗಿನ ಉಡುಪುಗಳನ್ನು ಧರಿಸಿ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಉತ್ತಮ.

Must Read

Skip to toolbar