ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ತೀವ್ರ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಮಳೆ ಸ್ವಲ್ಪ ಮಟ್ಟಿನ ತಂಪು ನೀಡುತ್ತಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ಸೂಚಿಸಿದೆ.
ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಭಾಗಗಳಲ್ಲಿ ಮಧ್ಯಾಹ್ನ ನಂತರ ಮೋಡ ಕವಿದು ಮಳೆಯ ವಾತಾವರಣ ನಿರ್ಮಾಣವಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿಯೂ ಸಂಜೆ ವೇಳೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿಯೂ ಕೆಲವೆಡೆ ತುಂತುರುದಿಂದ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಇದನ್ನೂ ಓದಿ:
ಹವಾಮಾನ ತಜ್ಞರ ಪ್ರಕಾರ, ಈ ಮಳೆಯ ಚಟುವಟಿಕೆ ಏಪ್ರಿಲ್ 4ರವರೆಗೆ ಮುಂದುವರಿಯುವ ಸಾಧ್ಯತೆ ಇದ್ದು, ನಂತರ ಸ್ವಲ್ಪ ವಿರಾಮ ಸಿಗಬಹುದು. ಆದರೆ ಏಪ್ರಿಲ್ 10ರಿಂದ ಮತ್ತೆ ರಾಜ್ಯದ ಹಲವೆಡೆ ಮಳೆಯ ಅಬ್ಬರ ಹೆಚ್ಚಾಗುವ ಲಕ್ಷಣಗಳು ಕಂಡುಬಂದಿವೆ. ಹಲವು ಜಿಲ್ಲೆಗಳಿಗೆ ಎರಡು ದಿನಗಳ ಯೆಲ್ಲೋ ಅಲರ್ಟ್ ಘೋಷಿಸುವ ಸಾಧ್ಯತೆಯೂ ಇದೆ.
ಇನ್ನೊಂದೆಡೆ, ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದ ವಾತಾವರಣ ಬದಲಾವಣೆಗಳು ಮುಂಗಾರು ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ.



