November 2, 2026
Monday, November 2, 2026
spot_img

WEATHER | ಚಳಿಗಾಲದಲ್ಲೂ ತಪ್ಪದ ಮಳೆಯ ಆರ್ಭಟ: ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಳಿಯ ಆರಂಭದ ಸುಳಿವು ನೀಡಿರುವ ರಾಜ್ಯದಲ್ಲಿ ಇದೀಗ ಮಳೆರಾಯ ಮತ್ತೆ ವಾಪಸ್ ಆಗಿದ್ದಾನೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ ಹಾಗೂ ಗುಡುಗು-ಮಿಂಚಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂದರ್ಭದಲ್ಲಿ ಬಿರುಗಾಳಿಯ ಅಬ್ಬರವೂ ಹೆಚ್ಚಿರಲಿದೆ.

ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಭಾಗಗಳಲ್ಲೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಮಳೆಯ ಪ್ರಭಾವ ತುಸು ಹೆಚ್ಚಿರಲಿದೆ. ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಜೊತೆಗೆ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

Must Read