ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ನೈರುತ್ಯ ಮುಂಗಾರು ಮಳೆ ತೀವ್ರಗೊಂಡಿದ್ದು, ಆಗಸ್ಟ್ 7ರವರೆಗೆ ನಿರಂತರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯವಾಗಿ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಮತ್ತು ಮಲೆನಾಡಿಗೆ ‘ರೆಡ್ ಅಲರ್ಟ್’
ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು, ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಪ್ರಬಲ ಮಳೆ ಸುರಿಯುವ ಸಾಧ್ಯತೆಯಿದೆ. ಕೊಡಗು ಮತ್ತು ಹಾಸನದಲ್ಲೂ ಮಳೆಯ ಪ್ರಮಾಣ ಹೆಚ್ಚಿರಲಿದೆ.
ದಕ್ಷಿಣ ಹಾಗೂ ಉತ್ತರ ಒಳನಾಡಿನ ಸ್ಥಿತಿಗತಿ
ಬೆಂಗಳೂರು (ನಗರ/ಗ್ರಾಮಾಂತರ), ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿಯಲ್ಲಿಯೂ ಉತ್ತಮ ಮಳೆಯಾಗಲಿದೆ.
ಉಳಿದಂತೆ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.



