ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ವರುಣನ ಆರ್ಭಟ ಜೋರಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಗುಡುಗು, ಮಿಂಚು ಹಾಗೂ ತೀವ್ರ ಗಾಳಿಯ ಮುನ್ಸೂಚನೆ ಇರುವುದರಿಂದ ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಈ ಹತ್ತು ಜಿಲ್ಲೆಗಳಿಗೆ ಹೈ ಅಲರ್ಟ್!
ದಕ್ಷಿಣ ಭಾರತದ ಪ್ರಮುಖ ರಾಜ್ಯವಾದ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಭಾಗಗಳಲ್ಲಿ ಹಳದಿ ಮುನ್ನೆಚ್ಚರಿಕೆ ನೀಡಲಾಗಿದೆ.
ಕರಾವಳಿ ಭಾಗದಲ್ಲಿ ಸಿಡಿಲಿನ ಆತಂಕ: ಮೀನುಗಾರರಿಗೆ ನಿರ್ಬಂಧ
ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಹಲವೆಡೆ ಗುಡುಗು-ಮಿಂಚು ಸಹಿತ ಮುಂಗಾರು ಪೂರ್ವ/ಮುಂಗಾರು ಮಳೆ ಅಬ್ಬರಿಸುವ ಲಕ್ಷಣಗಳಿವೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲ ಉಂಟು. ಹೀಗಾಗಿ ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಉತ್ತರ ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆ
ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಲಿದ್ದು, ಗಂಟೆಗೆ ಸುಮಾರು 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಇದರೊಂದಿಗೆ ಭಾರಿ ಮಳೆಯೂ ಬರಲಿದೆ. ಉಳಿದಂತೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಾಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.



