ಕರ್ನಾಟಕದಾದ್ಯಂತ ಚಳಿಯ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಚಳಿ ವಿಪರೀತವಾಗಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೀತದ ಗಾಳಿ ಹೆಚ್ಚಿರಲಿದ್ದು, ಇಲ್ಲಿನ ನಿವಾಸಿಗಳು ಹೆಚ್ಚಿನ ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.
ಬೆಂಗಳೂರು (ನಗರ ಮತ್ತು ಗ್ರಾಮಾಂತರ), ಮೈಸೂರು, ಕೋಲಾರ, ಮಂಡ್ಯ, ರಾಮನಗರ, ಹಾಸನ, ಕೊಡಗು ಸೇರಿದಂತೆ ಹದಿನೇಳಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹವಾಮಾನವು ಶುಷ್ಕವಾಗಿರಲಿದೆ.
ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಮೈಕೊರೆಯುವ ಚಳಿಯಿಂದ ಜನ ಬೆಚ್ಚಿಬಿದ್ದಿದ್ದಾರೆ. ನಗರದ ಕನಿಷ್ಠ ತಾಪಮಾನ 15°C ದಾಖಲಾಗಿದ್ದರೆ, ಗರಿಷ್ಠ ತಾಪಮಾನ 26°C ಇರಲಿದೆ ಎಂದು ಅಂದಾಜಿಸಲಾಗಿದೆ.

