ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕೆಲವೆಡೆ ಕೊಂಚ ಬಿಡುವು ನೀಡಿದ್ದ ಮುಂಗಾರು ಮಳೆ ಈಗ ಮತ್ತೆ ಚುರುಕಾಗುವ ಲಕ್ಷಣಗಳು ಗೋಚರಿಸುತ್ತಿವೆ. ಭಾರತೀಯ ಹವಾಮಾನ ಇಲಾಖೆಯು ಇಂದು ಮತ್ತು ನಾಳೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಕಡೆ ಗಾಳಿ ಹಾಗೂ ಗುಡುಗಿನ ಆರ್ಭಟವೂ ಜೋರಿರಲಿದೆ ಎಂದು ಮುನ್ಸೂಚನೆ ನೀಡಿದೆ.
ಇಂದು ಯಾವ ಜಿಲ್ಲೆಯಲ್ಲಿ ಮಳೆ
ಕರಾವಳಿ ಭಾಗವಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ. ಇನ್ನು, ದಕ್ಷಿಣ ಒಳನಾಡಿನಮಲೆನಾಡು ಮತ್ತು ದಕ್ಷಿಣದ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯದ ಕೆಲವೆಡೆ ಹದವಾದ ಮಳೆಯಾಗುವ ನಿರೀಕ್ಷೆಯಿದೆ. ಅದೇ ರೀತಿ ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಕೇವಲ ತುಂತುರು ಅಥವಾ ಹಗುರ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ನಾಳೆ ಮಳೆಯ ಅಬ್ಬರ ಮತ್ತಷ್ಟು ಚುರುಕು
ಸೋಮವಾರದ ವೇಳೆಗೆ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗಲಿದ್ದು, ಬಹುತೇಕ ಎಲ್ಲ ವಲಯಗಳಿಗೂ ಮಳೆಯ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಇದರೊಂದಿಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಇನ್ನು, ಉತ್ತರ ಒಳನಾಡಿನಬೆಳಗಾವಿ, ಬೀದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗಲಿದೆ.
ಬೆಂಗಳೂರು ಸೇರಿ ಇತರೆಡೆ ಸಾಧಾರಣ ಮಳೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು, ಕರಾವಳಿ ಮೂರೂ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.



