October 15, 2026
Thursday, October 15, 2026
spot_img

WEATHER | ರಾಜ್ಯಕ್ಕೆ ಮತ್ತೆ ಕಾಲಿಟ್ಟ ವರುಣದೇವ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಮುನಿಸಿಕೊಂಡಿರುವ ಮಳೆರಾಯನ ಮತ್ತೆ ಅಬ್ಬರಿಸುವ ಲಕ್ಷಣಗಳು ಕಾಣುತ್ತಿದೆ ಮುಂದಿನ ಕೆಲವು ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ವಿಶೇಷವಾಗಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ವಲಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಜೋರು ಗಾಳಿ-ಭಾರೀ ಮಳೆ?

ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಜನರೇ ಸ್ವಲ್ಪ ಅಲರ್ಟ್ ಆಗಿರಿ. ಈ ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಜತೆಗೆ ಜಿಟಿಜಿಟಿ ಮಳೆ ಸುರಿಯಲಿದೆ.

ಇನ್ನುಳಿದಂತೆ ಚಿತ್ರದುರ್ಗ, ಬಳ್ಳಾರಿ, ಮಲೆನಾಡಿನ ಭಾಗಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ತಣ್ಣನೆಯ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಕರ್ನಾಟಕದ ಸ್ಥಿತಿ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಗುಡುಗಿನ ಸದ್ದು ಕೇಳಿಸಲಿದ್ದು, ಸಾಧಾರಣ ಮಳೆಯಾಗಲಿದೆ.

ಇನ್ನು, ನಾಳೆ ಭಾನುವಾರವೂ ಬೆಂಗಳೂರು, ತುಮಕೂರು ಹಾಗೂ ಚಾಮರಾಜನಗರದಲ್ಲಿ ಮುಂಜಾನೆಯಿಂದಲೇ ಕಾರ್ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯಾಗುತ್ತಿದ್ದಂತೆ ಮಳೆಯಾಗುವ ನಿರೀಕ್ಷೆ ಇದೆ.

Must Read