ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಧ್ಯಮದಿಂದ ಭಾರಿ ಮಳೆಮುಂದುವರಿದಿದ್ದು, ಇಂದು ಮತ್ತೆ ವರುಣನ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ವರದಿ ಪ್ರಕಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದರ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗುಲ್ಬರ್ಗ, ಬೀದರ್, ಯಾದಗಿರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 30ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ನಗರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ ಎಂದು ವರದಿ ತಿಳಿಸಿದೆ.
ಇದೇ ವೇಳೆ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ‘ಮೋಂಥಾ’ ಚಂಡಮಾರುತ ತೀವ್ರ ರೂಪ ಪಡೆದುಕೊಂಡಿದ್ದು, ಇದರ ಪರಿಣಾಮವಾಗಿ ಆಂಧ್ರ, ತೆಲಂಗಾಣ, ಒಡಿಶಾ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 28ರಂದು ಮೊಂಟಾ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಗಾಳಿಯ ವೇಗವು ಗಂಟೆಗೆ 90 ರಿಂದ 110 ಕಿ.ಮೀ. ವರೆಗೆ ಇರಬಹುದು ಎಂದು ತಿಳಿಸಿದೆ.
ಸಮುದ್ರ ತೀರ ಪ್ರದೇಶಗಳಲ್ಲಿ ಜನರು ಎಚ್ಚರಿಕೆಯಿಂದ ಇರಬೇಕೆಂದು, ಮೀನುಗಾರಿಕೆ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ರಾಜ್ಯಗಳಲ್ಲಿ ಭಾರಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ.

