ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರದ ಸಚಿವರು, ಶಾಸಕರು ಹಾಗೂ ಸಂಸದರು ಸೇರಿ ಎಲ್ಲಾ ರಂಗದಲ್ಲಿಯೂ ಕಲ್ಯಾಣ ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿದ್ದಾರೆ, ಅಭಿವೃದ್ಧಿಯ ರಥ ಎಳೆಯುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಆರೋಗ್ಯ ಆವಿಷ್ಕಾರ ಯೋಜನೆಯಡಿ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. ಅಧಿಕಾರ ನಶ್ವರ, ಸಾಧನೆಗಳು ಅಜರಾಮರ, ಆದರೆ ಮತದಾರರೇ ಈಶ್ವರ. ಹೀಗಾಗಿ ನಿಮಗೆ ಅಭಿನಂದನೆ ಹೇಳಲು ನಾವು ಇಲ್ಲಿಗೆ ಬಂದಿದ್ದೇವೆ. ಕಲ್ಯಾಣ ಕರ್ನಾಟಕದ ಜನರು ಕಾಂಗ್ರೆಸ್ ಪಕ್ಷಕ್ಕೆ, ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವಕ್ಕೆ, ಸಿದ್ದರಾಮಯ್ಯ ಅವರ ಆಡಳಿತಕ್ಕೆ ಮೆಚ್ಚಿ ಈ ಭಾಗದಲ್ಲಿ ಆರು ಸಂಸದರನ್ನು ಆಯ್ಕೆ ಮಾಡಿ ದೇಶಕ್ಕೆ ದೊಡ್ಡ ಸಂದೇಶ ರವಾನಿಸಿದ್ದೀರಿ ಎಂದು ತಿಳಿಸಿದರು.