ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶು ಸಂಗೋಪನಾ ಸಚಿವ ಕೆ ವೆಂಕಟೇಶ್ ನೀಡಿದ ಗೋವುಗಳನ್ನ ಕಡಿದರೆ ಏನಾಗುತ್ತೆ ಎಂದು ಹೇಳಿಕೆಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೆಂಡ ಕಾರಿದ್ದಾರೆ.
ಟ್ವೀಟ್ ಮೂಲಕ ಸಚಿವ ಕೆ ವೆಂಕಟೇಶ್ ಹೇಳಿಕೆ ಖಂಡಿಸಿರುವ ಮಾಜಿ ಸಿಎಂ ಬೊಮ್ಮಾಯಿ, ‘ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ’ ಎಂದು ಬರೆದಿದ್ದಾರೆ.
ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೊ, ಹೈ ಕಮಾಂಡ್ ಮೆಚ್ಚಿಸಲೊ?
ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು. ಪೂಜ್ಯ ಮಹಾತ್ಮಾ ಗಾಂಧಿ ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960 ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನು ತರಲಾಗಿದೆ.
ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋ ಹತ್ಯೆ ಮಾಡುವ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ ಎಂದಿದ್ದಾರೆ.