ಹೊಸದಿಗಂತ ವರದಿ ಹುಬ್ಬಳ್ಳಿ:
ಕಾಂತರಾಜು ವರದಿ ಆಯೋಗವನ್ನು ಅವೈಜ್ಞಾನಿಕ ಎಂಬ ಕಾರಣಕ್ಕೆ ಸರ್ಕಾರ ತಿರಸ್ಕರಿಸಲಾಗಿದ್ದು, ಈಗ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ತರಾತುರಿಯಲ್ಲಿ ಮಾಡಿ ಸರ್ಕಾರ ಏನು ಸಾಧಿಸಲು ಹೊರಟಿದೆ ಎಂದು ಹರಿಹರ ಪಂಚಮಸಾಲಿ ಪೀಠದ ವಚನನಂದ ಸ್ವಾಮೀಜಿ ಪ್ರಶ್ನಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಈಗಲಾದರೂ ವೈಜ್ಞಾನಿಕ ಸಮೀಕ್ಷೆ ನಡೆಸಿ ಜನರ ಹಿತ ಬಯಸಬೇಕು. ಕಾನೂನು ತಜ್ಞರ ಸಮಿತಿ ರಚಿಸಬೇಕು. ಪತ್ರಿಕೆಗಳಲ್ಲಿ ಜಾಹೀರಾತು ನೀಡಿ, ಸಾರ್ವಜನಿಕರ ಆಕ್ಷೇಪಣೆ ಆಹ್ವಾನಿಸಬೇಕು. ಸಮಾಜದ ಹಿರಿಯರ ಜತೆ ಚರ್ಚಿಸಿ ಸಮೀಕ್ಷೆ ನಡೆಸಬೇಕು. ರಾಜ್ಯದ ಏಳು ಕೋಟಿ ಕನ್ನಡಿಗರ ಭವಿಷ್ಯದ ಪ್ರಶ್ನೆ. ಗೊಂದಲ ನಿವಾರಿಸುವಂತೆ ಮುಖ್ಯಮಂತ್ರಿ ಮತ್ತು ಸಚಿವರಿಗೆ ಮನವಿ ಮಾಡಲಾಗಿದೆ ಎಂದರು.
ಪಂಚಮಸಾಲಿ ಸಮಾಜಕ್ಕೂ ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದ ಏಕತಾ ಸಮಾವೇಶಕ್ಕೂ ಸಂಬಂಧ ಇಲ್ಲ. ಶಾಸಕ ವಿಜಯಾನಂದ ಕಾಶಪ್ಪನವರ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಪಂಚಮಸಾಲಿ ಪೀಠಗಳು ಹೇಳುವುದನ್ನು ಮಾತ್ರ ಸಮಾಜದವರು ಕೇಳಬೇಕು ಎಂದರು.