ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಯಾರು? ಅವರಿಗೆ ಆ ಅಧಿಕಾರ ಯಾರು ಕೊಟ್ಟರು? ರಾಜ್ಯದಲ್ಲಿ ಇರೋದು ರಬ್ಬರ್ ಸ್ಟ್ಯಾಂಪ್ ಗೃಹ ಸಚಿವರಾ? ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಡಿಸಿಎಂ ಮಂಗಳವಾರ ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಅದಕ್ಕೆ ಗೃಹ ಸಚಿವರು ಇಲ್ಲವೇ? ರಾಜ್ಯದಲ್ಲಿರುವ ಗೃಹ ಸಚಿವರು ಹೆಬ್ಬೆಟ್ಟು ಸಚಿವರಾ? ಎಂದು ಪ್ರಶ್ನಿಸಿದರು.
ಡಿಸಿಎಂ ಅವರು ಯಾವ ಅಧಿಕಾರದ ಮೇಲೆ ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ? ಗೃಹ ಇಲಾಖೆಯಲ್ಲಿ ಇವರ ಹಸ್ತಕ್ಷೇಪ ಯಾಕೆ? ಡಿಸಿಎಂ ಎಂದರೆ ಅವರು ಮಂತ್ರಿ ಅಷ್ಟೇ. ಕಾಂಗ್ರೆಸ್ ಸತ್ಯ ಶೋಧನಾ ಸಮಿತಿಗೆ ಅಧಿಕಾರಿಗಳು ಯಾವ ಮಾಹಿತಿ ಕೊಡುತ್ತಾರೆ? ಕಾರ್ಯಕರ್ತರು, ಕಾಂಗ್ರೆಸ್ ನಾಯಕರು ಘಟನೆಗೆ ಕಾರಣರಾದ ಶಾಸಕರ ವಿರುದ್ದವೇ ಸತ್ಯಶೋಧನೆ ಸಮಿತಿಯ ಮುಂದೆ ದೂರು ನೀಡಿದ್ದಾರೆ. ಹಾಗಾದರೆ ನಿಮ್ಮ ತನಿಖೆಯ ಹಣೆಬರಹ ಏನು ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.
ಇದನ್ನೂಓದಿ: ಬಳ್ಳಾರಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯ ಇಲ್ಲ: ಪರಮೇಶ್ವರ್
ಬಳ್ಳಾರಿ ನಗರದಲ್ಲಿ ನಡೆದ ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಸರ್ಕಾರ ತರಾತುರಿಯಲ್ಲಿ ಕೆಲಸ ಮಾಡುತ್ತಿದೆ. ಕೇವಲ ಬ್ಯಾನರ್ ಕಟ್ಟುವ ವಿಚಾರಕ್ಕೆ ಬೀದಿಯಲ್ಲಿ ಗುಂಡು ಹಾರಿಸ್ತಾರಾ? ಮರಣೋತ್ತರ ಪರೀಕ್ಷೆ ನಡೆದ ನಂತರ ಕೊಲೆಯಾದ ಕಾರ್ಯಕರ್ತನ ಮೃತದೇಹವನ್ನು ತರಾತುರಿಯಲ್ಲಿ ಸುಟ್ಟು ಹಾಕಿದ್ದು ಯಾಕೆ? ಕುಟುಂಬದವರಿಗೆ ಅಂತಿಮ ವಿಧಿ ವಿಧಾನ ನಡೆಸುವುದಕ್ಕೆ ಅವಕಾಶವನ್ನೂ ನೀಡದೆ ಮೃತದೇಹವನ್ನು ತರಾತುರಿಯಲ್ಲಿ ಸುಟ್ಟಿದ್ದು ಯಾಕೆ? ಇದಕ್ಕೆಲ್ಲಾ ಸರ್ಕಾರ ಉತ್ತರ ಕೊಡಬೇಕಲ್ಲವೇ? ಇಂದು ಕುಮಾರಸ್ವಾಮಿ ಅವರು ಒತ್ತಾಯಿಸಿದರು.

