ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ರೇಣುಕಾಸ್ವಾಮಿ ಮೇಲೆ ದರ್ಶನ್ ಸೇರಿ ಹಲವರು ಹಲ್ಲೆ ನಡೆಸಿದ್ದು, ನಂತರ ರೇಣುಕಾಸ್ವಾಮಿ ಸಾವನ್ನಪ್ಪಿದ್ದರು. ನಟ ದರ್ಶನ್ ಸೇರಿದಂತೆ ಹಲವರು ರೇಣುಕಾಸ್ವಾಮಿ ಅವರ ಎದೆಗೆ ಒದ್ದು, ಹೊಡೆದಿದ್ದಾರೆ. ಕೊಲೆ ಮಾಡಿದ ಆರೋಪಿಗಳೊಂದಿಗೆ ದರ್ಶನ್ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಇದೀಗ ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಮೆಡಿಕಲ್ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತ ಪವಿತ್ರಾ ಗೌಡಗೆ ಆಕ್ಷೇಪಾರ್ಹ ಸಂದೇಶ ಕಳುಹಿಸುತ್ತಿದ್ದ ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ ಎಂದು ಗೊತ್ತಾಗಿದೆ. ದರ್ಶನ್ ಸೇರಿದಂತೆ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸರು ಅಪರಿಚಿತ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ಆರಂಭಿಸಿದ್ದಾರೆ. ಇದೇ ವೇಳೆ ಗಿರಿನಗರದ ಮೂವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದು, ತಾವೇ ಕೊಲೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಆರ್ಥಿಕ ಕಾರಣಕ್ಕಾಗಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ ನಟ ದರ್ಶನ್ ಭಾಗಿಯಾಗಿರುವುದು ಪತ್ತೆಯಾಗಿದೆ.
ಬೇರೆ ಮೂಲಗಳ ಪ್ರಕಾರ ದರ್ಶನ್ ಅವರೇ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಗಾಯಗೊಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದಾರೆ. ನಂತರ ಶವವನ್ನು ಚರಂಡಿಯ ಬಳಿ ಎಸೆದಿದ್ದಾರೆ ಎಂದು ವರದಿಯಾಗಿದೆ.