ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯದಂತೆ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತದೆ. ಚನ್ನಗಿರಿ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ಪ್ರತ್ಯೇಕ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆ ನಡೆಯುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಈ ವಿಚಾರದಲ್ಲಿ ಸರ್ಕಾರ ನಿಲುವು ಅಚಲವಾಗಿದೆ. ಗೃಹಸಚಿವರು ಈಗಾಗಲೇ ನಿರ್ದೇಶನ ನೀಡಿದ್ದಾರೆ ಎಂದರು.
ಪರಿಷತ್ ಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ತೆರಳುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಪಕ್ಷದ ಅಧ್ಯಕ್ಷನಾಗಿ ಹೋಗುವುದು ನನ್ನ ಕರ್ತವ್ಯ. ಹೀಗಾಗಿ ಹೋಗುತ್ತೇನೆ ಎಂದರು.