ನಿಮಗೆ ಯಾಕೆ ಕೇಂದ್ರ ಸರ್ಕಾರ ಅಕ್ಕಿ ಕೊಡಬೇಕು?: ರಾಜ್ಯ ಸರಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದ ಜನರಿಗೆ ಅಕ್ಕಿ ಗ್ಯಾರಂಟಿ ಕುರಿತು ದಿನಕ್ಕೊಂದು ನೆಪ ಹೇಳುತ್ತಿರುವ ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​​​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ತಾನು ಎಸಗಿದ ಸ್ವಯಂಕೃತ ತಪ್ಪಿಗೆ ಕಾಂಗ್ರೆಸ್ ಕೇಂದ್ರ ಸರಕಾರ ಮೇಲೆ ಗೂಬೆ ಕೂರಿಸುತ್ತಾ ಜನರನ್ನು ಯಮಾರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾಕೆ ನಿಮಗೆ ಕೇಂದ್ರ ಸರ್ಕಾರ ಅಕ್ಕಿ ಕೊಡಬೇಕು ? ನೀವು ಕೇಂದ್ರ ಸರ್ಕಾರಕ್ಕೆ ಅರ್ಜಿ ಹಾಕಿಕೊಂಡಿದ್ರಾ? ಯಾವನೋ ಬಂದು ಎಲೆಕ್ಷನ್ ಸ್ಟ್ರಾಟೆಜಿಸ್ಟ್ ಐಡಿಯಾ ಕೊಟ್ಟ ಅಂತ ನೀವು ಫ್ರೀ ಫ್ರೀ ಅಂದ್ರಿ. ಸಚಿವರ ಹೆಂಡ್ತಿಗೂ ಫ್ರೀ, ನನ್ನ ಹೆಂಡತಿಗೂ ಫ್ರೀ ಎಂದು ಹೇಳಿ ಎಲ್ಲರೂ ಅರ್ಜಿ ಹಾಕಿಕೊಳ್ಳಬಹುದು ಎಂದ್ರಿ. ಈಗ ನೋಡಿದರೆ ಬೇರೆ ವರಸೆ ಶುರು ಮಾಡಿಕೊಂಡಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೃಹಜ್ಯೋತಿ ಕತ್ತಲಾಗಿ ಪರಿಣಮಿಸಿದೆ. ವಿದ್ಯುತ್ ಉಚಿತ ಕೊಡ್ತೀವಿ ಅಂತ ಹೇಳಿ ಈಗಿನ ಪರಿಸ್ಥಿತಿಯನ್ನು ಅವಲೋಕನ ಮಾಡಬೇಕು. ವಿಟಿಯು ಉಪ ಕುಲಪತಿ ಬಾಯಿ ಬಡ್ಕೊತಿದ್ದಾರೆ. ವಿದ್ಯುತ್ ಬಿಲ್ ನೋಡಿ ಅವರು ಶಾಕ್​​ಗೆ ಗುರಿಯಾಗಿದ್ದಾರೆ. ಬಾಕಿ ಮೊತ್ತ ಕಂಡು ಬೇಸ್ತು ಬಿದ್ದಿದ್ದಾರೆ. ಇನ್ನೆಷ್ಟು ಶಾಕ್ ಕೊಡುತ್ತೀರಿ ಎಂದು ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

ಇವರು ಯಾವ ರೀತಿ ಟೋಪಿ ಹಾಕ್ತಾರೆ ಅಂತ ನೋಡುವ ಅನಿವಾರ್ಯತೆಯನ್ನು ಜನರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಸರಕಾರದ ಸಚಿವ ಕೇಂದ್ರ ಸರ್ಕಾರವನ್ನು ದೂಷಣೆ ಮಾಡುತ್ತಿದ್ದಾರೆ. ಗ್ಯಾರಂಟಿಗಳನ್ನು ರೂಪಿಸುವಾಗ ಇದೆಲ್ಲಾ ಗೊತ್ತಿರಲಿಲ್ಲವೇ? ಎಂದು ಅವರು ತರಾಟೆಗೆ ತೆಗೆದುಕೊಂಡರು.

ಮುಖ್ಯಮಂತ್ರಿಗಳು ನೋಡಿದರೆ ಭಾರತದ ಆಹಾರ ನಿಗಮಕ್ಕೆ ಪತ್ರ ಬರೆದಿದ್ದೆ ಎಂದು ಹೇಳುತ್ತಿದ್ದಾರೆ. ಅವರು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಇಂಥ ಉಡಾಫೆ ಉತ್ತರ ಕೊಟ್ಟರೆ ಹೇಗೆ? ಕೇಂದ್ರದಿಂದ ಅಕ್ಕಿ ಬೇಕು ಅಂದರೆ ಕೇಂದ್ರ ಸರಕಾರದ ಸಂಬಂಧಪಟ್ಟ ಸಚಿವರ ಜತೆ ಮಾತನಾಡಬೇಕಿತ್ತು. ಮನವಿ ಕೊಡಬೇಕಿತ್ತು. ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವರೇ ಹೋಗಿ ಚರ್ಚೆ ನಡೆಸಬೇಕಿತ್ತು. ಅದನ್ನು ಬಿಟ್ಟು ಉಡಾಫೆ ಹೇಳಿಕೆ ಕೊಡ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಕೇಂದ್ರ ಸರ್ಕಾರಕ್ಕೆ ಅವರದೇ ಆದ ಬದ್ಧತೆ ಇದೆ. ನಮಗೆ ಅಕ್ಕಿ ಬೇಕು ಅಂದರೆ ಅವರು ಹೇಗೆ ಕೊಡ್ತಾರೆ? ನಾನು ಸಾಲಾಮನ್ನಾ ಮಾಡಿದಾಗ ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿದ್ದ ಸಾಲಮನ್ನಾ ಮಾಡಿದಾಗ ಪ್ರಧಾನಿಗಳ ಹತ್ತಿರ ಹೋಗಿ ಕೇಳಿದ್ನಾ? ದರ್ದು ಇರೋದು ಕಾಂಗ್ರೆಸ್ ಪಕ್ಷಕ್ಕೆ, ಅವರಿಗೇನಿದೆ ದರ್ದು? ನಿಮಗೆ ಬೇಕಾದ ವ್ಯವಸ್ಥೆ ನೀವೇ ಮಾಡಿಕೊಳ್ಳಬೇಕು ಎಂದು ಚಾಟಿ ಬೀಸಿದರು . .

ನಾನು ಚುನಾವಣೆ ವೇಳೆ ಪಂಚರತ್ನ ಯೋಜನೆಗಳನ್ನು ಘೋಷಣೆ ಮಾಡಿದ್ದೆ. ಆದ್ರೆ ಅವುಗಳನ್ನು ಹೇಗೆ ಜಾರಿ ಮಾಡಬೇಕು? ಹೇಗೆ ಹಣ ಹೊಂದಿಸಬೇಕು ಎಂಬುದಕ್ಕೆ ರೂಪುರೇಷೆ ಸಿದ್ದಮಾಡಿದ್ದೆ. ಆದರೆ ಜನ ನನ್ನನ್ನು ನಂಬಲಿಲ್ಲ. ಪಾಪ ಇವರ 5 ಗ್ಯಾರಂಟಿಗಳನ್ನು ನಂಬಿದರು ಎಂದು ಕುಮಾರಸ್ವಾಮಿ ಹೇಳಿದರು.

ಸತೀಶ್ ಜಾರಕಿಹೊಳಿ ಹೇಳಿಕೆಗೆ ಆಕ್ರೋಶ
ಕೇಂದ್ರ ಸರಕಾರ ಸರ್ವರ್ ಹ್ಯಾಕ್ ಮಾಡಿದ್ದ ಪರಿಣಾಮ ಗೃಹಲಕ್ಷ್ಮಿ ಗ್ಯಾರಂಟಿ ಜಾರಿ ಮಾಡಲಾಗುತ್ತಿಲ್ಲ ಎಂದಿರುವ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಉತ್ತರಿಸಿದ ಕುಮಾರಸ್ವಾಮಿ, ಯಾರ್ರೀ ಸತೀಶ್ ಜಾರಕಿಹೊಳಿ? ಬಾಯಿ ಚಪಲಕ್ಕೆ ಮಾತನಾಡ್ತಿದ್ದಾರೆ ಅವರು. ಯಾಕೆ ಹ್ಯಾಕ್ ಮಾಡ್ತಾರೆ, ನಿಮ್ಮ ಸರ್ವರ್ ಬಲಪಡಿಸಿಕೊಳ್ಳೋದು ನಿಮ್ಮ ಜವಾಬ್ದಾರಿ ಎಂದರು.

ನಾನಿನ್ನು ಇವರಿಗೆ ಟೈಮ್ ಕೊಡ್ತೀನಿ. ಬಜೆಟ್ ಅಧಿವೇಶನದಲ್ಲಿ ಏನೇನು ಘೋಷಣೆ ಮಾಡ್ತಾರೆ ನೋಡೋಣ. ಪ್ರಣಾಳಿಕೆಯಲ್ಲಿ ಕೂಡ ಅದೆಷ್ಟೋ ಭರವಸೆಗಳನ್ನು ನೀಡಿದ್ದಾರೆ. ಎಲ್ಲವೂ ಎಲ್ಲಿಗೆ ಬಂದು ನಿಲ್ಲುತ್ತದೆಯೋ ನೋಡೋಣ ಎಂದು ಕುಮಾರಸ್ವಾಮಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!