ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿ ವರ್ಷ ವಿಶ್ವ ಯೋಗ ದಿನವನ್ನು ಜೂನ್ 21 ರಂದು ವಿಶ್ವದಾದ್ಯಂತ ಬಹಳ ಅದ್ಧೂರಿಯಾಗಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ, ಜನರು ಮಾನಸಿಕ ಹಾಗೂ ದೈಹಿಕ ಸಮಸ್ಯೆಗೆ ಯೋಗ ಅಭ್ಯಾಸದ ಮೂಲಕ ಉತ್ತರ ಹುಡುಕುತ್ತಿದ್ದಾರೆ.
ಪ್ರತಿ ವರ್ಷವೂ ಜೂನ್ 21ರಂದು ಯೋಗ ದಿನವನ್ನು ಆಚರಿಸಲಾಗುತ್ತದೆ. ಆದರೆ ಇದೇ ದಿನಾಂಕದಲ್ಲಿ ಯಾಕೆ ಯೋಗ ದಿನ ಆಚರಣೆ ಮಾಡಬೇಕು? ಈ ದಿನ ಯಾವ ರೀತಿ ಸ್ಪೆಶಲ್? ಇಲ್ಲಿದೆ ಮಾಹಿತಿ..
ಜೂನ್ 21 ವರ್ಷದಲ್ಲಿ ಉತ್ತರ ಗೋಳಾರ್ಧದ ಅತಿ ಉದ್ದದ ಹಾಗೂ ದಕ್ಷಿಣ ಗೋಳಾರ್ಧದ ಅತಿ ಚಿಕ್ಕ ದಿನವಾಗಿದೆ. ಈ ಕಾರಣದಿಂದ ಈ ದಿನವನ್ನು ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಆಯ್ಕೆ ಮಾಡಲಾಗಿದೆ. ಈ ದಿನವನ್ನು ಬೇಸಿಗೆ ಆಯನ ಸಂಕ್ರಾತಿ ದಿನವೆಂದು ಅಂದರೆ ವರ್ಷದಲ್ಲಿನ ಅತ್ಯಂತ ಹೆಚ್ಚು ಹಗಲುಳ್ಳ ದಿನವೆಂದು ಕರೆಯಲಾಗುತ್ತದೆ. ಯೋಗದ ದೃಷ್ಟಿಕೋನದಲ್ಲಿ ಇದು ಅತ್ಯಂತ ಹೆಚ್ಚು ಮಹತ್ವ ಪಡೆದಿದೆ. ಇದು ದಕ್ಷಿಣಯಾನಕ್ಕೆ ಪರಿವರ್ತನೆ ಎಂದು ಗುರುತಿಸಲಾಗುತ್ತದೆ.
ಈ ಬಾರಿ ಅಂತರರಾಷ್ಟ್ರೀಯ ಯೋಗ ದಿನದ 2023 ರ ಥೀಮ್ ‘ಮಾನವೀಯತೆ’. ಅಂತರರಾಷ್ಟ್ರೀಯ ಯೋಗ ದಿನದ ಆಚರಣೆಗಳು ಯೋಗದ ಸಮಗ್ರ ಸ್ವರೂಪದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಪಂಚದಾದ್ಯಂತ ನಿಯಮಿತ ಆಡಳಿತವಾಗಿ ಪ್ರಚಾರ ಮಾಡುವ ಗುರಿಯನ್ನು ಹೊಂದಿವೆ. ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಕರಡು ಪ್ರಸ್ತಾವನೆಯನ್ನು 2014 ಡಿಸೆಂಬರ್‌ನಲ್ಲಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ, ಭಾರತದ ಖಾಯಂ ಪ್ರತಿನಿಧಿಯಾಗಿರುವ ಅಶೋಕ್ ಕುಮಾರ್ ಮಂಡಿಸಿದ್ದರು. ವಿಶ್ವಸಂಸ್ಥೆಗೆ ಇದು ಐತಿಹಾಸಿಕ ಕ್ಷಣವಾಗಿದ್ದು, ಅದರ ಸದಸ್ಯ ರಾಷ್ಟ್ರಗಳು ಅಭೂತಪೂರ್ವ ಬೆಂಬಲ ಸೂಚಿಸಿದ್ದರು. ವಿಶ್ವ ಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು ಅನುಮೋದನೆಯನ್ನು ನೀಡಿದ್ದವು.