ಹೊಸದಿಗಂತ ವರದಿ ಮಡಿಕೇರಿ:
ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವೀರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಪಾಲಿಬೆಟ್ಟದ ಮಸ್ಕಲ್ ತೋಟದ ಕಾರ್ಮಿಕ ಬಾಬಿ (57) ಎಂಬವರೇ ಗಾಯಗೊಂಡವರು. ಮಂಗಳವಾರ ಬೆಳಗ್ಗೆ ಎಂದಿನಂತೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ದಿಢೀರಾಗಿ ಎದುರಾದ ಆನೆ ಅವರ ಮೇಲೆ ದಾಳಿ ನಡೆಸಿದೆ. ಈ ಸಂದರ್ಭ ಗಂಭೀರವಾಗಿ ಗಾಯಗೊಂಡಿರುವ ಬಾಬಿ ಅವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಅರಣ್ಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇತ್ತೀಚೆಗೆ ಕಾಫಿ ತೋಟಗಳಲ್ಲಿ ಹಲಸು ಹಣ್ಣಾಗುವ ಸಮಯವಾಗಿದ್ದು, ಕಾಡಾನೆಗಳು ಹಲಸಿನ ಹಣ್ಣು ಅರಸಿ ಕಾಫಿ ತೋಟಗಳಿಗೆ ನುಗ್ಗುವುದು ಸಾಮಾನ್ಯವಾಗಿದೆ. ತೋಟಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ಆನೆಗಳ ಇರುವಿಕೆಯ ಬಗ್ಗೆ ಮುಂಜಾಗ್ರತೆ ವಹಿಸುವುದು ಅನಿವಾರ್ಯವಾಗಿದೆ.