ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ಒಂದೆಡೆ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿದ್ದರೆ, ಅತ್ತ ಜೆಡಿಎಸ್ ಮುಂದಿನ ವಿಧಾನ ಸಭೆ ಚುನಾವಣೆಗೆ ಸಜ್ಜಾಗಲು ಪಕ್ಷವನ್ನು ಬಲಿಷ್ಠಗೊಳಿಸುತ್ತಿದೆ. ಇದರ ನಡುವೆ ಕಾಂಗ್ರೆಸ್ ಸೇರುತ್ತಾರೆ ಎಂದು ಭಾರೀ ಸುದ್ದಿಯಾಗಿದ್ದ ಜೆಡಿಎಸ್ ಪಕ್ಷದ ಹಿರಿಯ ನಾಯಕ ಜಿ.ಟಿ. ದೇವೇಗೌಡ ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ್ದಾರೆ.
ಬೆಂಗಳೂರಿನ ಪದ್ಮನಾಭ ನಗರದ ನಿವಾಸದಲ್ಲಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಜಿ.ಟಿ. ದೇವೇಗೌಡ ಅವರು ಮಹತ್ವದ ಚರ್ಚೆ ನಡೆಸಿದ್ದಾರೆ.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿಟಿ ದೇವೇಗೌಡ ಅವರು, ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡ ಕುರಿತು ಸ್ಪಷ್ಟನೆ ನೀಡಿದರು. ನಾನು ಜೆಡಿಎಸ್ ನಲ್ಲಿಯೇ ಇದ್ದೇನೆ. 2028 ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್ನಿಂದಲೇ ಸ್ಪರ್ಧೆ ಮಾಡ್ತೀನಿ ಎಂದು ಹೇಳಿದರು. ಈ ಮೂಲಕ ಕಾಂಗ್ರೆಸ್ ಸೇರುವ ಊಹಾಪೋಹಗಳಿಗೆ ಜಿ.ಟಿ. ದೇವೇಗೌಡರು ತೆರೆ ಎಳೆದರು.
ಮಾಜಿ ಪ್ರಧಾನಿ ದೇವೇಗೌಡರು ರೈತರ ಪರ ನಿಂತು ದುಡಿದವರು. ಅವರ ಬಗ್ಗೆ ಅಪಾರ ಗೌರವ ಇದೆ. ಈ ಭೇಟಿ ವೇಳೆ ನಾವು ಯಾವುದೇ ರಾಜಕೀಯ ಮಾತಾಡಿಲ್ಲ. ನಿನಗೆ ಒಳ್ಳೆಯದಾಗಲಿ, ಚೆನ್ನಾಗಿರು ಎಂದು ಅಶೀರ್ವಾದ ಮಾಡಿದ್ದಾರೆ. ನಾನು ಪಕ್ಷಕ್ಕೆ ಎಷ್ಟು ಪ್ರಾಮಾಣಿಕವಾಗಿ ದುಡಿದಿದ್ದೇನೆ ಎಂದು ಅವರಿಗೆ ತಿಳಿದಿದೆ. ನಾನು ನನ್ನ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿದ್ದೇನೆ ಎಂದು ಹೇಳಿದರು.



