ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಹೋಗಲಿದೆಯೇ ಟೀಂ ಇಂಡಿಯಾ?: ಅಮಿತ್​ ಶಾ ಮಾತಿನ ಅರ್ಥವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

2025 ರಲ್ಲಿ ನಡೆಯಲ್ಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ ಆತಿಥ್ಯ ವಹಿಸುತ್ತಿದ್ದು, ಹೀಗಾಗಿ ವಿಪಾಕಿಸ್ತಾನ ಕ್ರಿಕೆಟ್ ಮಂಡಳಿ ಈಗಾಗಲೇ ತಯಾರಿಯಲ್ಲಿ ತೊಡಗಿದೆ. ಆದರೆ, ಈ ಟೂರ್ನಿಯಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗಲಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈ ಬಗ್ಗೆ ಈ ಹಿಂದೆಯೇ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದ ಬಿಸಿಸಿಐ, ಭಾರತ ಸರ್ಕಾರ ಅನುಮತಿ ನೀಡಿದರೆ ಮಾತ್ರ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸುವುದಾಗಿ ತಿಳಿಸಿತ್ತು. ಏತನ್ಮಧ್ಯೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಫೋಟಕ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್​ ಶಾ, ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ಹೋಗುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ವಾಸ್ತವವಾಗಿ ಕಳೆದ ಶುಕ್ರವಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ಚುನಾವಣೆಗೆ ಮೊದಲು ಭಾರತೀಯ ಜನತಾ ಪಕ್ಷದ ಪ್ರಣಾಳಿಕೆಯನ್ನು ಗೃಹ ಸಚಿವ ಅಮಿತ್​ ಶಾ ಬಿಡುಗಡೆ ಮಾಡಿದರು. ಈ ಸಂದರ್ಭ ಮಾತನಾಡಿದ ಅಮಿತ್ ಶಾ, ಪಾಕಿಸ್ತಾನದ ಹೀನ ಕೃತ್ಯಗಳನ್ನು ಖಂಡಿಸಿದರು. ಇದರ ಜೊತೆಗೆ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಸುದಾರಿಸುವ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಭಯೋತ್ಪಾದನೆಯನ್ನು ಸಂಪೂರ್ಣವಾಗಿ ತೊಡೆದುಹಾಕುವವರೆಗೆ ನಾವು ಪಾಕಿಸ್ತಾನ ಸರ್ಕಾರದ ಜೊತೆ ಯಾವುದೇ ಮಾತುಕತೆಗೆ ಮುಂದಾಗುವುದಿಲ್ಲ. ಬದಲಿಗೆ, ಜಮ್ಮು ಮತ್ತು ಕಾಶ್ಮೀರದ ಯುವಕರ ಅಭಿಪ್ರಾಯಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವರೊಂದಿಗೆ ಮಾತನಾಡಲು ನಾವು ಬಯಸುತ್ತೇವೆ ಎಂದರು.

ಇದೀಗ ಅಮಿತ್​​ ಶಾ ಅವರ ಹೇಳಿಕೆಯನ್ನು ಚಾಂಪಿಯನ್ಸ್​ ಟ್ರೋಫಿಗೂ ಅನ್ವಯ ಮಾಡಲಾಗುತ್ತಿದ್ದು, ಭಾರತ ಸರ್ಕಾರ ಯಾವುದೇ ಸಂದರ್ಭದಲ್ಲೂ ಚಾಂಪಿಯನ್ಸ್ ಟ್ರೋಫಿ ಆಡಲು ಭಾರತೀಯ ಆಟಗಾರರನ್ನು ಅಲ್ಲಿಗೆ ಕಳುಹಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಲಾಗುತ್ತಿದೆ. ಇದಲ್ಲದೆ ಕೆಲ ಸಮಯದ ಹಿಂದೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಕೂಡ ಟೀಂ ಇಂಡಿಯಾವನ್ನು ಕಳುಹಿಸುವ ನಿರ್ಧಾರ ಸಂಪೂರ್ಣವಾಗಿ ಭಾರತ ಸರ್ಕಾರದ ಕೈಯಲ್ಲಿದೆ ಎಂದು ಹೇಳಿಕೆ ನೀಡಿದ್ದರು. ಹಾಗಾಗಿ ಅಮಿತ್ ಶಾ, ಪಾಕಿಸ್ತಾನದ ಬಗ್ಗೆ ಈ ರೀತಿಯ ಹೇಳಿಕೆ ನೀಡಿರುವುದನ್ನು ಗಮಿಸಿದರೆ ಭಾರತ ಸರ್ಕಾರ, ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸುವುದಿಲ್ಲ ಎಂಬುದು ಖಚಿತವಾದಂತ್ತಾಗಿದೆ.

ಇತ್ತ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಬಿಸಿಸಿಐ ಈಗಾಗಲೇ ಐಸಿಸಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಟೀಂ ಇಂಡಿಯಾದ ಪಂದ್ಯಗಳನ್ನು ಶ್ರೀಲಂಕಾ ಅಥವಾ ದುಬೈನಲ್ಲಿ ನಡೆಸಬೇಕೆಂದು ಐಸಿಸಿ ಮುಂದೆ ಬಿಸಿಸಿಐ ಮನವಿ ಇಟ್ಟಿದೆ. ಆದರೆ, ಈ ಬಗ್ಗೆ ಐಸಿಸಿಯಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!