Friday, December 26, 2025

ಅಪಾಯಕಾರಿ ಬಲೂನ್ ಗ್ಯಾಸ್‌ಗೆ ಬೀಳಲಿದೆಯೇ ನಿಷೇಧ? ಅರಮನೆ ಸ್ಫೋಟದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ಅರಮನೆ ಆವರಣದಲ್ಲಿ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವರು, ಸಂತ್ರಸ್ತರಿಗೆ ಸಂಪೂರ್ಣ ಸರ್ಕಾರಿ ನೆರವು ಘೋಷಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, “ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ,” ಎಂದು ತಿಳಿಸಿದರು. ಅಪಾಯಕಾರಿ ರಾಸಾಯನಿಕಗಳನ್ನು ಬಳಸಿ ಬಲೂನ್ ತಯಾರಿಸುವುದನ್ನು ನಿರ್ಬಂಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಲಕ್ಷ್ಮಿ ಹಾಗೂ ಮಂಜುಳಾ ಅವರ ಸ್ಥಿತಿ ಸದ್ಯ ಚಿಂತಾಜನಕವಾಗಿದ್ದು, ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬ ಗಾಯಾಳು ಕೊಟ್ರೇಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. “ಗಾಯಗೊಂಡ ಎಲ್ಲರಿಗೂ ಉಚಿತವಾಗಿ ಉತ್ತಮ ಚಿಕಿತ್ಸೆ ನೀಡಲು ಸೂಚಿಸಲಾಗಿದ್ದು, ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ,” ಎಂದು ಸಚಿವರು ಭರವಸೆ ನೀಡಿದರು.

ನಗರಕ್ಕೆ ಆಗಮಿಸುವ ಸೀಸನಲ್ ವ್ಯಾಪಾರಿಗಳ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಪ್ರತ್ಯೇಕ ವ್ಯವಸ್ಥೆ ರೂಪಿಸಲಾಗುವುದು. ಇದರಿಂದ ಸುರಕ್ಷತಾ ನಿಯಮಗಳ ಉಲ್ಲಂಘನೆಯನ್ನು ತಡೆಯಲು ಸಾಧ್ಯವಾಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

error: Content is protected !!