ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ವಿಲ್ಸನ್ ಗಾರ್ಡನ್ನಲ್ಲಿ ಸಂಭವಿಸಿದ ಎಲ್ಪಿಜಿ ಸಿಲಿಂಡರ್ ಸ್ಫೋಟ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 11 ಮಂದಿಯ ಪೈಕಿ ಮತ್ತಿಬ್ಬರು ಸೋಮವಾರ ಸಾವನ್ನಪ್ಪಿದ್ದು, ಇದರೊಂದಿಗೆ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಮೃತರನ್ನು ತಮಿಳುನಾಡು ಮೂಲದ ಮನೆಕೆಲಸಗಾರ್ತಿ ಕಸ್ತೂರಮ್ಮ (30) ಮತ್ತು ಅವರ ಮಗಳು ಕಾಯಲ್ (8) ಎಂದು ಗುರ್ತಿಸಲಾಗಿದೆ.
ಶೇ. 35 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಕಾಯಲ್ (8), ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂಜೆ 5 ಗಂಟೆಗೆ ಮೃತಪಟ್ಟಿದ್ದಾಳೆ. ಇನ್ನು ಶೇ. 40 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಬಾಲಕಿಯ ತಾಯಿ ರಾತ್ರಿ 8 ಗಂಟೆ ಸಮಯದಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ ಇತರರಲ್ಲಿ, ಸರಸಮ್ಮ ಎಂಬುವವರಿಗೆ ಇನ್ನೂ ಚಿಕಿತ್ಸೆ ಮುಂದುವರೆದಿದ್ದು, ಉಳಿದವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.