Friday, June 2, 2023

Latest Posts

ವರುಣ ಕ್ಷೇತ್ರಕ್ಕೆ ಬದಲಾವಣೆ ಗಾಳಿ ಬೀಸಲಿದೆ, ಬಿಜೆಪಿ ಗೆಲ್ಲುವುದು ಖಚಿತ: ಬಿ.ವೈ. ವಿಜಯೇಂದ್ರ

ಹೊಸದಿಗಂತ ವರದಿ ಮೈಸೂರು:

ವರುಣ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ಬಿಜೆಪಿ ಅಭ್ಯರ್ಥಿಯಾದ ಸಚಿವ ಬಿ ಸೋಮಣ್ಣ ಅವರು ಗೆಲುವನ್ನು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಶನಿವಾರ ಮೈಸೂರಿನ ಚಾಮರಾಜಪುರಂ ವಾಣಿವಿಲಾಸ ರಸ್ತೆಯಲ್ಲಿರುವ ಬಿಜೆಪಿ ಮೈಸೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ವರುಣ ಕ್ಷೇತ್ರ ನನ್ನನ್ನು ಇಡೀ ರಾಜ್ಯಕ್ಕೆ ಪರಿಚಯಿಸಿಕೊಟ್ಟಿದೆ. ಹಾಗಾಗಿ ಕ್ಷೇತ್ರದ ಋಣ ನನ್ನ ಮೇಲಿದೆ. ಈ ಕ್ಷೇತ್ರದ ಜನರ ಪ್ರೀತಿಗೆ ನಾನು ತುಂಬಾ ಆಭಾರಿಯಾಗಿದ್ದಾನೆ. ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದೇನೆ ಎಂದು ಹೇಳಿದರು.

ವರುಣಾ ಕ್ಷೇತ್ರದಲ್ಲಿ ಕೂಡ ಈಗ ಪ್ರವಾಸ ಮಾಡಿ, ಚುನಾವಣಾ ಪ್ರಚಾರ ನಡೆಸಿದ್ದೇನೆ. ಮತಪ್ರಚಾರ ಮಾಡಿದ್ದೇನೆ. ಮುಂದೆ ಕೂಡ ಈ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲು ಬರುತ್ತೇನೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಪ್ರಬಲವಾಗಿ ಸಂಘಟನೆ ಮಾಡಿ, ಚುನಾವಣೆಗಳಲ್ಲಿ ಅತಿ ಹೆಚ್ಚು ಸ್ಥಾನವನ್ನು ಗೆಲ್ಲಿಸುತ್ತೇನೆ ಎಂದು ಹೇಳಿದರು.

ಮೈಸೂರಿನ ಕೆಆರ್ ಕ್ಷೇತ್ರದಲ್ಲಿ ಕೂಡ ಬಿಜೆಪಿ ಅಭ್ಯರ್ಥಿ ಟಿ.ಎಸ್ .ಶ್ರೀವಸ್ತ ಅವರು ಗೆಲ್ಲಲಿದ್ದಾರೆ. ಶಾಸಕ ಎಸ್.ಎ. ರಾಮದಾಸ್ ಹಾಗೂ ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್ ಸೇರಿದಂತೆ ಎಲ್ಲರೂ ಕೂಡ ಒಗ್ಗಟ್ಟಾಗಿ, ಬಿಜೆಪಿ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಲಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡುತ್ತೇವೆ ಅಭ್ಯರ್ಥಿಯನ್ನು ಗೆಲ್ಲಿಸಿ ಕೊಳ್ಳುತ್ತೇವೆ ಎಂದು ಹೇಳಿದರು. ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷ. ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ ಹಾಗೂ ಆಸ್ತಿ.ಯಾವುದೇ ಮುಖಂಡರ ಮೇಲೆ ಪಕ್ಷ ಅವಲಂಬಿತವಾಗಿಲ್ಲ. ಕಾರ್ಯಕರ್ತರ ಮೇಲೆ ಪಕ್ಷ ಅವಲಂಬಿತವಾಗಿದೆ. ಕಾರ್ಯಕರ್ತರ ಪರಿಶ್ರಮದಿಂದ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಮೈಸೂರಿನ ಕೆ.ಆರ್.ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್.ಶ್ರೀವತ್ಸ, ಪಕ್ಷದ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಮೈಸೂರು ನಗರ ಕಾರ್ಯಾಧ್ಯಕ್ಷ ಹೆಚ್.ಜಿ.ಗಿರಿಧರ್, ವಕ್ತಾರರಾದ ಡಾ.ಕೆ.ವಸಂತ್ ಕುಮಾರ್, ಎಂ.ಎ.ಮೋಹನ್, ಬಿಜೆಪಿ ಮೈಸೂರು ವಿಭಾಗ ಮಾಧ್ಯಮ ಸಂಯೋಜಕ ನಾಗೇಶ್, ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್, ಕೇಬಲ್‌ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!