ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತೀಯ ಬೌಲರ್‌ಗಳು ಅತ್ಯುತ್ತಮ ಪ್ರದರ್ಶನ ನೀಡಿದರು. ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ತಂಡವು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 125 ರನ್ ಗಳಿಸಲಷ್ಟೇ ಶಕ್ತವಾಯಿತು. ಜಿಂಬಾಬ್ವೆ ಪರ ವೆಸ್ಲಿ ಮಾಧೇವೆರೆ 39 ರನ್ ಹಾಗೂ ಮರುಮಾನಿ 27 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಭಾರತದ ಪರ ಪ್ರಿನ್ಸ್ ಯಾದವ್ ಮತ್ತು ಮಾಯಾಂಕ್ ಯಾದವ್ ತಲಾ ಎರಡು ವಿಕೆಟ್ ಪಡೆದು ಎದುರಾಳಿ ಬ್ಯಾಟರ್‌ಗಳಿಗೆ ಕಂಟಕರಾದರು.
649 ದಿನಗಳ ನಂತರ ಮಯಾಂಕ್ ಭರ್ಜರಿ ಕಂಬ್ಯಾಕ್!
2024ರ ನಂತರ ಬರೋಬ್ಬರಿ 649 ದಿನಗಳ ಕಾಲ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರವಿದ್ದ ಭಾರತದ ವೇಗಿ ಮಯಾಂಕ್ ಯಾದವ್ ಮೈದಾನಕ್ಕೆ ಅದ್ಭುತವಾಗಿ ಮರಳಿದ್ದಾರೆ. ತಾವು ಎಸೆದ ಪಂದ್ಯದ ಮೊದಲ ಓವರ್‌ನ ಮೊದಲ ಎಸೆತದಲ್ಲೇ ಜಿಂಬಾಬ್ವೆಯ ಆರಂಭಿಕ ಆಟಗಾರ ಬ್ರಿಯಾನ್ ಬೆನೆಟ್ ಅವರನ್ನು ಔಟ್ ಮಾಡುವ ಮೂಲಕ ಭರ್ಜರಿ ವಿಕೆಟ್ ಕಬಳಿಸಿದರು.
ವಿಶೇಷ ಎಲೈಟ್ ಪಟ್ಟಿಗೆ ಸೇರಿದ ಮಯಾಂಕ್ ಯಾದವ್
ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇನಿಂಗ್ಸ್‌ನ ಮೊದಲ ಎಸೆತದಲ್ಲೇ ಎರಡು ಅಥವಾ ಅದಕ್ಕಿಂತ ಹೆಚ್ಚು ಬಾರಿ ವಿಕೆಟ್ ಪಡೆದ ಭಾರತದ ನಾಲ್ಕನೇ ಬೌಲರ್ ಎಂಬ ಹೆಗ್ಗಳಿಕೆಗೆ ಮಯಾಂಕ್ ಪಾತ್ರರಾಗಿದ್ದಾರೆ. ಈ ಹಿಂದೆ ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಹಾಗೂ ಹಾರ್ದಿಕ್ ಪಾಂಡ್ಯ ಈ ಸಾಧನೆ ಮಾಡಿದ್ದರು.
ಮಯಾಂಕ್ ಯಾದವ್ ಈ ಹಿಂದೆ 2024ರಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಇನಿಂಗ್ಸ್‌ನ ಮೊದಲ ಎಸೆತದಲ್ಲೇ ವಿಕೆಟ್ ಕಬಳಿಸಿದ್ದರು. ಇದೀಗ 2026ರಲ್ಲಿ ಜಿಂಬಾಬ್ವೆ ವಿರುದ್ಧ ಈ ಸಾಧನೆಯನ್ನು ಮರುಕಳಿಸಿದ್ದಾರೆ. 2022ರಲ್ಲಿ ಶ್ರೀಲಂಕಾ ಮತ್ತು ಇಂಗ್ಲೆಂಡ್ ವಿರುದ್ಧ ಈ ಸಾಧನೆ ಮಾಡಿದ ಮೊದಲ ಭಾರತೀಯ ಬೌಲರ್ ಭುವನೇಶ್ವರ್ ಕುಮಾರ್ ಅವರಾಗಿದ್ದಾರೆ.



