ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯಶಬ್ಧಗಳಿಂದ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ದಿಯಾ ಚಿತ್ರ ನಿರ್ಮಾಪಕ ಕೃಷ್ಣಚೈತನ್ಯ ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪೂರ್ವವಿಭಾಗದ ನಾಗರಿಕ ಹಕ್ಕು ಜಾರಿನಿರ್ದೇಶನಾಲಯ (ಡಿಸಿಆರ್‌ಇ) ಠಾಣೆಯಲ್ಲಿ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
ರಾಜ್ಯಸರ್ಕಾರ ಡಿಸಿಆರ್‌ಇ ಠಾಣೆಗಳಿಗೆ ಮಾನ್ಯತೆ ನೀಡಿದ ಬಳಿಕ ರಾಜಧಾನಿಯಲ್ಲಿ ಜಾತಿ ದೌರ್ಜನ್ಯ ಸಂಬಂಧ ದಾಖಲಾದ ಮೊದಲ ಪ್ರಕರಣ ಇದಾಗಿದೆ.
ನೇತಾಜಿ ನಗರದ ನಿವಾಸಿಯಾಗಿರುವ ಮಹಿಳೆಯೊಬ್ಬರು ದೂರು ನೀಡಿದ್ದು, ದೂರಿನ ಅನ್ವಯ ಚಿತ್ರ ನಿರ್ಮಾಪಕ ಕೃಷ್ಣಚೈತನ್ಯ, ಸತ್ಯನಾರಾಯಣ ರೆಡ್ಡಿ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ, ಅತಿಕ್ರಮ ಪ್ರವೇಶ, ಹಲ್ಲೆ, ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪಗಳ ಅನ್ವಯ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.