ಹೊಸದಿಗಂತ ಡಿಜಿಟಲ್ ಡೆಸ್ಕ್:
ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ಮಹಿಳೆಯೊಬ್ಬರು ವಿಷದ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದಕ್ಕೆ ಮೈಕ್ರೋ ಫೈನಾನ್ಸ್ ಕಿರುಕುಳವೇ ಕಾರಣ ಎಂದು ಹೇಳಲಾಗಿದೆ.
ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ 5 ಲಕ್ಷ ಸಾಲ ಪಡೆದಿದ್ದರು. ಪ್ರತಿ ತಿಂಗಳು 20,000ಕ್ಕೂ ಹೆಚ್ಚು ಇಎಂಐ ಕಟ್ಟಬೇಕಾಗಿತ್ತು.
ಸಾಲದಲ್ಲಿ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿತ್ತು. ಈ ಹಿನ್ನೆಲೆ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು. ಹಾಗಾಗಿ ಸಮೀಪದ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.