ಉಡುಪಿಯಲ್ಲಿ‌ ಮರಕ್ಕೆ ಮಹಿಳೆಯನ್ನು ಕಟ್ಟಿ ಹಲ್ಲೆ: ಅನಾಗರೀಕ ವರ್ತನೆ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ ಎಂದ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಲಾಗಿದ್ದು, ಈ ಘಟನೆಗೆ ಸಿಎಂ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು.

ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ ಎಂದಿದ್ದಾರೆ.

ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ. ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!