Thursday, November 13, 2025

ಮಹಿಳೆಯರಿಗೆ ವರ್ಷಕ್ಕೆ 12 ದಿನ ವೇತನ ಸಹಿತ ಮುಟ್ಟಿನ ರಜೆ, ಕಂಡೀಷನ್ಸ್‌ ಇದೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸಬೇಕು ಎಂದು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ತೋಟ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್‌ ಕಾರ್ಮಿಕರ ಕಾಯ್ದೆ, ಮೋಟಾರು ಸಾರಿಗೆ ಕಾಯ್ದೆ ಅಡಿಯಲ್ಲಿ ನೋಂದಣಿ ಆಗಿರುವ ಕೈಗಾರಿಕೆಗಳು ಮತ್ತು ಸಂಸ್ಥೆಗಳೂ ಸೇರಿದಂತೆ ಎಲ್ಲ ವಲಯಗಳಲ್ಲಿ ಕೆಲಸ ಮಾಡುತ್ತಿರುವ 18ರಿಂದ 52ರ ವಯೋಮಾನದ ಎಲ್ಲ ಕಾಯಂ, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಈ ಸೌಲಭ್ಯ ನೀಡಬೇಕು ಎಂದು ಎಲ್ಲ ಉದ್ಯೋಗದಾತರಿಗೂ ಸೂಚಿಸಿದೆ.

ಈ ಸಂಬಂಧ ಸರ್ಕಾರ 2024ರ ಜನವರಿ 12ರಂದು ಅಧಿಸೂಚನೆ ಹೊರಡಿಸಿತ್ತು. ಜತೆಗೆ ಕಾರ್ಮಿಕ ಇಲಾಖೆ ಆಯುಕ್ತರು 21/02/2025ರಂದು ಪತ್ರ ಬರೆದಿದ್ದರು.

ಬಳಿಕ 9/10/2025ರಂದು ನಡೆದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಕೂಡ ನೀಡಲಾಗಿತ್ತು.

ಕಂಡೀಷನ್ಸ್‌ ಏನು?

ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿರುವುದಿಲ್ಲ.

ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂಬ ಷರತ್ತುಗಳನ್ನು ವಿವರಿಸಿ ಆದೇಶಿಸಿದ್ದಾರೆ.

52 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಈ ರಜೆಯ ಸೌಲಭ್ಯ ಇಲ್ಲ

error: Content is protected !!