ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರದ ಕ್ರಮವನ್ನು ವಿರೋಧಿಸಿ ಅಸ್ಸಾಂನ ಧುಬ್ರಿ ಜಿಲ್ಲೆಯ ಪೊಲೀಸ್ ಠಾಣೆ ಎದುರು ಶನಿವಾರ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದರು. ಧುಬ್ರಿ ಜಿಲ್ಲೆಯ ತಮರ್ಹಾಟ್ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಲು ಜಮಾಯಿಸಿದ ಮಹಿಳೆಯರನ್ನು ಚದುರಿಸಲು ಭದ್ರತಾ ಸಿಬ್ಬಂದಿ ಲಾಠಿ ಚಾರ್ಜ್ ಮಾಡಬೇಕಾಯಿತು.
ಬಾಲ್ಯವಿವಾಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ತಮ್ಮ ಪತಿ ಮತ್ತು ಪುತ್ರರನ್ನು ಬಿಡುಗಡೆ ಮಾಡುವಂತೆ ಮಹಿಳೆಯರು ಒತ್ತಾಯಿಸಿದರು. ಪೊಲೀಸರ ಪ್ರಕಾರ, ಪ್ರತಿಭಟನಾಕಾರರು ಪೊಲೀಸ್ ಠಾಣೆ ಗೇಟ್ ಮತ್ತು ಭದ್ರತಾ ತಡೆಗೋಡೆಯನ್ನು ಮುರಿಯಲು ಪ್ರಯತ್ನಿಸಿದಾಗ ಭದ್ರತಾ ಸಿಬ್ಬಂದಿ ಲಾಠಿ ಚಾರ್ಜ್ ಅನಿವಾರ್ಯವಾಯಿತು ಎಂದಉ ತಿಳಿಸಿದ್ದಾರೆ.
ಜಗಳದ ವೇಳೆ ಒಬ್ಬ ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಧುಬ್ರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅಪರ್ಣಾತಿಳಿಸಿದ್ದಾರೆ. ನಾಗರಿಕರ ಕಡೆಯಿಂದ ಯಾವುದೇ ಗಾಯದ ವರದಿಯಾಗಿಲ್ಲ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು. ಬಾಲ್ಯವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರು ಇದುವರೆಗೆ ರಾಜ್ಯಾದ್ಯಂತ 2258 ಜನರನ್ನು ಬಂಧಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಸ್ಸಾಂ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಜಿಪಿ ಸಿಂಗ್, ಬಂಧಿತರಲ್ಲಿ 52 ಮಂದಿ ಪುರೋಹಿತರು ಮತ್ತು ಖಾಜಿಗಳು ಬಾಲ್ಯವಿವಾಹದಲ್ಲಿ ಭಾಗಿಯಾಗಿದ್ದಾರೆ. ಧುಬ್ರಿ, ಬಾರ್ಪೇಟಾ, ಕೊಕ್ರಜಾರ್ ಮತ್ತು ವಿಶ್ವನಾಥ್ ಜಿಲ್ಲೆಗಳಿಂದ ಗರಿಷ್ಠ ಸಂಖ್ಯೆಯ ಜನರನ್ನು ಬಂಧಿಸಲಾಗಿದೆ ಎಂದು ಹೇಳಿದರು.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದಲ್ಲಿ ಬಾಲ್ಯವಿವಾಹ ಮಿತಿಮೀರಿದೆ ಎಂಬ ಮಾಹಿತಿ ಸಿಕ್ಕಿದ್ದರಿಂದ ತನಿಖೆ ನಡೆಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ ಎಂದು ಡಿಜಿಪಿ ಸಿಂಗ್ ತಿಳಿಸಿದ್ದಾರೆ. ಹೆಚ್ಚಿನ ಪ್ರಕರಣಗಳನ್ನು ಪೋಕ್ಸೊ ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ಗಳಡಿಯಲ್ಲಿ ದಾಖಲಿಸಲಾಗಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಪಿ ತಿಳಿಸಿದ್ದಾರೆ.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದರು.
ಏತನ್ಮಧ್ಯೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದಲ್ಲಿ ಬಾಲ್ಯ ವಿವಾಹಗಳ ವಿರುದ್ಧ ಮುಂದಿನ ದಿನಗಳಲ್ಲಿ ಶಿಸ್ತುಕ್ರಮವನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.