Tuesday, March 28, 2023

Latest Posts

ಕಾರ್ಯಕರ್ತರೇ ಪಕ್ಷದ ಬೆನ್ನೆಲುಬು, ಅವರ ಶ್ರಮದಿಂದ ಮಾತ್ರ ಗೆಲುವು ಸಾಧ್ಯ: ಶಾಸಕ ಅಪ್ಪಚ್ಚುರಂಜನ್

ಹೊಸದಿಗಂತ ವರದಿ, ಸೋಮವಾರಪೇಟೆ:

ಬಿಜೆಪಿಗೆ ಕಾರ್ಯಕರ್ತರೇ ಬೆನ್ನೆಲುಬಾಗಿದ್ದು, ಕಾರ್ಯಕರ್ತರ ಸಹಕಾರದಿಂದ ಮಾತ್ರ ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ಸಾಧ್ಯವಾಗುತ್ತಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅಭಿಪ್ರಾಯಪಟ್ಟರು.

ಇಲ್ಲಿಗೆ ಸಮೀಪದ ಕುಂಬೂರಿನಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಆಯೋಜಿಸಲಾಗಿದ್ದ ಸೋಮವಾರಪೇಟೆ ತಾಲೂಕು ಬಿಜೆಪಿ ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮದಲ್ಲಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿ ಅವರು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದಿಟ್ಟ ನಿರ್ಧಾರದ ಮೂಲಕ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿವೆ. ಸರ್ಕಾರಗಳ ಅಭಿವೃದ್ಧಿ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ತಲುಪಲು ಕಾರ್ಯಕರ್ತರೇ ಸಂಪರ್ಕ ಸೇತು ಎಂದು ಅವರು ನುಡಿದರು.
ಕಳೆದ ಐದು ವರ್ಷಗಳಲ್ಲಿ ಮಡಿಕೇರಿ ಕ್ಷೇತ್ರಕ್ಕೆ 1800 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು
ಮಾಡಲಾಗಿದೆ. ಪ್ರಕೃತಿ ವಿಕೋಪ ಹಾಗೂ ಕೊರೋನಾ ಸಂಕಷ್ಟದಲ್ಲೂ ಜನತೆಯ ಹಿತದೃಷ್ಟಿಯಿಂದ ಪರಿಸ್ತಿಯನ್ನು ಸಮರ್ಪಕವಾಗಿ ನಿಭಾಯಿಸಲಾಗಿದೆ ಎಂದು ಅಪ್ಪಚ್ಚುರಂಜನ್ ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ ಸುಮಾರು 5 ಲಕ್ಷ ಜನರಿಗೆ 11ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಜಿಲ್ಲೆಯ 47ಸಾವಿರ ರೈತರಿಗೆ 138ಕೋಟಿ ಬೆಳೆ ಹಾನಿ ಪರಿಹಾರ ವಿತರಿಸಲಾಗಿದೆ ಎಂದ ಅವರು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟಬಹಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸುಜಾಕುಶಾಲಪ್ಪ, ಚುನಾವಣೆ ಉಸ್ತುವಾರಿ ತಿಮ್ಮಪ್ಪ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್, ತಾಲೂಕು ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ,ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮುಂತಾದವರು ಉಪಸ್ಥಿತರಿದ್ದರು..

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!