ಲೇಖಕ ಪ್ರೊ.ಮುಜಾಫರ್‌ ಅಸ್ಸಾದಿ ಇನ್ನಿಲ್ಲ: ಸಿಎಂ ಸಿದ್ದರಾಮಯ್ಯ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಿಂತಕ, ಲೇಖಕ ಪ್ರೊ.ಮುಜಾಫರ್‌ ಅಸ್ಸಾದಿ (63) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.

ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಸ್ಸಾದಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಅಸ್ಸಾದಿ ಅವರು ಸೇವೆ ಸಲ್ಲಿಸಿದ್ದರು. ವಿವಿಯ ಹಂಗಾಮಿ ಕುಲಪತಿಯಾಗಿ 2022ರಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು.

ನಮ್ಮೆಲ್ಲರಿಗೆ ಪ್ರೀತಿಪಾತ್ರರಾಗಿದ್ದ ಹಿರಿಯ ವಿದ್ವಾಂಸ ಮತ್ತು ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ ಅವರ ಅನಿರೀಕ್ಷಿತ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಪ್ರೊ.ಅಸ್ಸಾದಿ ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು. ಅವರ ಅಗಲಿಕೆಯಿಂದ ನಾಡು ಬಡವಾಗಿದೆ, ಅವರ ಅಗಲಿಕೆಯಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕಷ್ಟ.

ನಿರಂತರವಾದ ಅಧ್ಯಯನ ಮತ್ತು ಸಂಶೋಧನೆಗಳಿಂದಾಗಿ ಕರ್ನಾಟಕದಲ್ಲಿ ಮಾತ್ರವಲ್ಲ ದೇಶ-ವಿದೇಶಗಳಲ್ಲಿಯೂ ತಮ್ಮ ವಿದ್ವತ್‌ಪೂರ್ಣ ಬರವಣಿಗೆ ಮತ್ತು ಉಪನ್ಯಾಸಗಳ ಮೂಲಕ ಜನಪ್ರಿಯರಾಗಿದ್ದ ಪ್ರೊ.ಅಸ್ಸಾದಿ ಅವರು ಕನ್ನಡದ ಹೆಮ್ಮೆಯ ಪುತ್ರ. ವರ್ಷಗಳಿಂದ ನನ್ನ ಹಿತೈಷಿಯಾಗಿ ರಾಜಕೀಯವಾಗಿ ಸದಾ ನನ್ನ ಏಳಿಗೆಯನ್ನು ಹಾರೈಸುತ್ತಿದ್ದ ಪ್ರೊ.ಅಸ್ಸಾದಿ ಅವರ ಸಾವು ವೈಯಕ್ತಿಕವಾಗಿಯೂ ನನ್ನ ಪಾಲಿಗೆ ದೊಡ್ಡ ನಷ್ಟ. ಪ್ರೊ.ಅಸ್ಸಾದಿ ಅವರನ್ನು ಕಳೆದುಕೊಂಡ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿಎಂ ಪೋಸ್ಟ್‌ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!