ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಆ ಸ್ಥಾನದಲ್ಲಿ ಮುಂದುವರಿಸಬಾರದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ಮುಖಂಡರು, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೆರವು ಪಡೆಯಲು ಮುಂದಾಗಿದ್ದಾರೆ.
ಯತ್ನಾಳ್ ಬಣದಲ್ಲಿ ಪ್ರಬಲವಾಗಿ ಗುರುತಿಸಿಕೊಂಡಿರುವ ಶಾಸಕ ರಮೇಶ್ ಜಾರಕಿಹೊಳಿಗೆ ಮೊದಲಿನಿಂದಲೂ ದೇವೇಂದ್ರ ಫಡ್ನವೀಸ್ ಜತೆ ನಂಟಿದೆ. ಆ ಮೂಲಕ ವರಿಷ್ಠರ ಮೇಲೆ ಒತ್ತಡ ಹೇರುವ ತಂತ್ರವನ್ನು ಯತ್ನಾಳ್ ಬಣ ನಡೆಸುತ್ತಿದೆ ಎನ್ನಲಾಗಿದೆ.
ಯತ್ನಾಳ್ ಮತ್ತು ಜಾರಕಿಹೊಳಿ ಮೊದಲಿನಿಂದಲೂ ವಿಜಯೇಂದ್ರ ವಿರುದ್ಧ ಕಿಡಿ ಕಾರುತ್ತಲೇ ಬಂದಿದ್ದಾರೆ. ಅವರೊಂದಿಗೆ ಈಗ ಇನ್ನೂ ಕೆಲವು ನಾಯಕರು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಬೆಂಬಲ ಸೂಚಿಸಿದ್ದಾರೆ. ಎಲ್ಲರ ಗುರಿ ಈಗ ವಿಜಯೇಂದ್ರರನ್ನು ಮತ್ತೊಮ್ಮೆ ರಾಜ್ಯಾಧ್ಯಕ್ಷರನ್ನಾಗಿ ಮಾಡಬಾರದು ಎಂಬುದೇ ಆಗಿದೆ.