ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದಾದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಗೃಹ ಸಚಿವ ಡಾ. ಜಿ.ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ನಂತರ ಮಾತನಾಡಿದ ಡಿಕೆಶಿ ಇದು ಸೂಕ್ಷ್ಮ ವಿಚಾರವಾಗಿರುವುದರಿಂದ ಗೃಹ ಸಚಿವರು ಮಾತನಾಡುತ್ತಾರೆ ಎಂದು ಹೇಳಿದರು.
ಚರ್ಚೆ ಬಳಿಕ ಮಾತನಾಡಿದ ಪರಮೇಶ್ವರ್, ಯಡಿಯೂರಪ್ಪ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದರಂತೆ ಪೊಲೀಸರು ಕಾನೂನು ಪ್ರಕಾರ ತನಿಖೆ ನಡೆಸುತ್ತಿದ್ದಾರೆ ಎಂದರು.
ತನಿಖೆ ಪೂರ್ಣಗೊಳ್ಳುವವರೆಗೆ ಏನನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ. ಇದು ಅತ್ಯಂತ ಸೂಕ್ಷ್ಮ ವಿಚಾರ. ಮಹಿಳೆಗೆ ರಕ್ಷಣೆ ಬೇಕಾದಾಗ ನಾವು ಅದನ್ನು ನೀಡುತ್ತೇವೆ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಅವರನ್ನು ವಶಕ್ಕೆ ಪಡೆಯುವ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ.