ಹೊಸದಿಗಂತ ವರದಿ ಚಿತ್ರದುರ್ಗ:
ತಾವಿನ್ನೂ ಮೊದಲ ಬಾರಿಗೆ ಶಾಸಕರಾಗಿರಬಹುದು. ಆದರೆ ಹರಿಪ್ರಸಾದ್ ಅವರು ಡಾಕ್ಟರೇಟ್ ಪಡೆದಿದ್ದರೂ ಇದುವರೆಗೆ ಯಾವುದೇ ಚುನಾವಣೆಯಲ್ಲಿ ಗೆದ್ದಿಲ್ಲ. ಕಾರ್ಯಕರ್ತರ ಮೂಲಕ ತಮಗೇ ಬ್ಯಾನರ್ ಹರಿದುಕೊಳ್ಳುವಂತೆ ಹೇಳಿ ಮಾಧ್ಯಮಗಳಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳುವ ಕೀಳುಮಟ್ಟದ ರಾಜಕೀಯ ತಮಗೆ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದರು.
ಚಿತ್ರದುರ್ಗ ನಗರದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ದರುಶನ ಪಡೆದ ಬಳಿಕ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕರ ಪಾದಯಾತ್ರೆ, ಬ್ಯಾನರ್ ವಿವಾದ ಹಾಗೂ ಪ್ರಮುಖ ನಾಯಕರ ಹೇಳಿಕೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಬಳ್ಳಾರಿಯಲ್ಲಿ ಬಿಜೆಪಿ ನಡೆಸಿದ 10 ದಿನಗಳ ಬೃಹತ್ ಪಾದಯಾತ್ರೆಯ ಯಶಸ್ಸಿನಿಂದ ಪ್ರೇರಣೆಗೊಂಡು ಕಾಂಗ್ರೆಸ್ ನಾಯಕರು ಶಿಕಾರಿಪುರದಲ್ಲಿ ಪಾದಯಾತ್ರೆ ಆರಂಭಿಸಿದ್ದಾರೆ ಎಂದು ವ್ಯಂಗ್ಯವಾಡಿದರು.
ಶಿಕಾರಿಪುರ ತಾಲೂಕು ಹೋರಾಟದ ಹಾದಿಗೆ ಹೆಸರುವಾಸಿಯಾಗಿದೆ. ಬಿ.ಎಸ್. ಯಡಿಯೂರಪ್ಪನವರಿಗೆ ರಾಜಕೀಯ ಜನ್ಮ ನೀಡಿದ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದು, ಅವರಿಗೆ ಒಳ್ಳೆಯದಾಗಲಿ ಎಂದು ವಿಜಯೇಂದ್ರ ಹೇಳಿದರು.
ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲಿನ ಲಂಚದ ಆರೋಪಗಳು ಈಗಾಗಲೇ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದು, ನಿರಪರಾಧಿ ಎಂದು ಸಾಬೀತಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲೇ ಈ ತನಿಖೆ ನಡೆದಿದೆ. ಆದರೆ ಕಾಂಗ್ರೆಸ್ ನಾಯಕರು ಹತಾಶೆಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಒಳಗಿನ ಭಿನ್ನಮತ ಮತ್ತು ಸರ್ಕಾರದ ವೈಫಲ್ಯ:
ಕಾಂಗ್ರೆಸ್‌ನಲ್ಲಿ ಶಕ್ತಿ ಪ್ರದರ್ಶನ ಹಾಗೂ ಆಂತರಿಕ ಭಿನ್ನಮತ ಎದ್ದು ಕಾಣಿಸುತ್ತಿದೆ. ಬರ ಕಾಲದ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡಲು ಸರ್ಕಾರ ವಿಫಲವಾಗಿದೆ. ಜನರು ಹಾಗೂ ರೈತರು ಈ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ ರಾಜ್ಯದ ಜನತೆಯೇ ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದರು.
ಹಿರಿಯೂರು ಉಪ ಚುನಾವಣೆಗೆ ಸಂಬಂಧಪಟ್ಟಂತೆ ಅಭ್ಯರ್ಥಿಗಳ ಆಯ್ಕೆ ಕುರಿತು ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಿಜಯೇಂದ್ರ ತಿಳಿಸಿದರು.



