ಯುವಜನರು ಕನ್ನಡದ ಶ್ರೀಮಂತ ಪರಂಪರೆಯ ನೈಜ ವಾರಸುದಾರರಾಗಬೇಕು:ಡಾ. ಬಿ.ಸಿ.ಸತೀಶ

ಹೊಸದಿಗಂತ ವರದಿ ಮಡಿಕೇರಿ:
ಯುವ ಜನರು ಕನ್ನಡ ನಾಡು-ನುಡಿ, ಸಾಹಿತ್ಯ, ಸಂಸ್ಕೃತಿ ಹಾಗೂ ಕಲೆಯ ಬಗೆಗೆ ಅಭಿರುಚಿ ಬೆಳೆಸಿಕೊಳ್ಳುವ ಮೂಲಕ ನಮ್ಮ ಶ್ರೀಮಂತ ಪರಂಪರೆಯ ನೈಜ ವಾರಸುದಾರರಾಗಿ ಕನ್ನಡತನವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಕೊಡಗು ಜಿಲ್ಲಾಧಿಕಾರಿ ಡಾ.‌ಬಿ.ಸಿ.ಸತೀಶ ಅವರು ಆಶಯ ವ್ಯಕ್ತಪಡಿಸಿದರು.
ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 67ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕನ್ನಡ ನಾಡು-ನುಡಿಗೆ ಸುಮಾರು 2 ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಎರಡು ಸಾವಿರ ವರ್ಷಗಳ ಹಿಂದೆಯೇ ಈ ಭಾಷೆಯನ್ನು ಮಾತನಾಡುವ ಜನ ಇದ್ದರು ಎಂಬುದಕ್ಕೆ ಇತಿಹಾಸದಲ್ಲಿ ಸಾಕಷ್ಟು ಉಲ್ಲೇಖಗಳಿವೆ. ಕ್ರಿ.ಶ.450 ರ ಕನ್ನಡ ಭಾಷೆಯ ಮೊಟ್ಟ ಮೊದಲ ಹಲ್ಮಿಡಿ ಶಾಸನದಲ್ಲಿ ಕನ್ನಡದ ಪದಗಳಿವೆ. ಕ್ರಿ.ಶ. 850 ರ ಕನ್ನಡದ ಮೊಟ್ಟ ಮೊದಲ ಗ್ರಂಥ ಕವಿರಾಜ ಮಾರ್ಗದಲ್ಲಿ ಕನ್ನಡ ನಾಡಿನ ವಿಸ್ತಾರದ ಬಗ್ಗೆ ಉಲ್ಲೇಖವಿದೆ. 21 ನೇ ಶತಮಾನದ ಈ ಹೊತ್ತಿನಲ್ಲಿ ಕನ್ನಡ ಭಾಷೆ ಆಧುನೀಕತೆಯೊಂದಿಗೆ ತನ್ನದೇ ಅಸ್ಮಿತೆಯನ್ನು ಉಳಿಸಿಕೊಂಡಿದೆ. ಈ ಮಣ್ಣಿಗೆ, ನುಡಿಗೊಂದು ಸೊಗಸಿದೆ, ಸೌಂದರ್ಯವಿದೆ, ಬೆಡಗಿದೆ, ಆದ್ದರಿಂದ ಪ್ರಾದೇಶಿಕ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಕಾರ್ಯವನ್ನು ನಾವು ಮಾಡಬೇಕಿದೆ. ಎಂದು ನುಡಿದರು.

ಕೇವಲ ನೆಲ- ಭಾಷೆಯಲ್ಲ: ಇಂದು ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಮ್ಮ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಅಂತಹ ಎಲ್ಲಾ ಮಹಾನ್ ಚೇತನರನ್ನು ಅತ್ಯಂತ ಕೃತಜ್ಞತೆಯಿಂದ ಸ್ಮರಿಸುವುದಾಗಿ ತಿಳಿಸಿದ ಅವರು, ಕನ್ನಡ, ಕರ್ನಾಟಕ, ಕರುನಾಡು ಎಂಬುದು ಕೇವಲ ಬರೀ ನೆಲ ಮತ್ತು ಭಾಷೆಯಲ್ಲ. ಅದೊಂದು ಕನ್ನಡಿಗರ ಭಾವನೆ ಮತ್ತು ಬಾಂಧವ್ಯವಾಗಿದೆ. ಕನ್ನಡ ರಾಜ್ಯೋತ್ಸವ ನಮ್ಮೆಲ್ಲರ ನಿತ್ಯೋತ್ಸವವಾಗಬೇಕು ಎಂದರು.

ಸುಮಾರು ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ಹಾಗೂ ಸಾಹಿತ್ಯದ ಹಿರಿಮೆ ವಿಶ್ವವ್ಯಾಪಿಯಾಗಿದ್ದು, ಪಂಪ, ರನ್ನ, ಜನ್ನ, ಪೊನ್ನ, ಕುಮಾರವ್ಯಾಸ ಮುಂತಾದ ಕವಿಗಳು ಕನ್ನಡ ಭಾಷಾ ದೀವಿಗೆಯನ್ನು ಆಗಸದೆತ್ತರಕ್ಕೆ ಬೆಳಗಿಸಿದ್ದಾರೆ. ಪುರಂದರದಾಸ, ಕನಕದಾಸರ ಭಕ್ತಿಪಂಥ ಮತ್ತು ಕೀರ್ತನೆಗಳ ಮೂಲಕ ಹಾಗೂ ಬಸವಾದಿ ಶರಣರು ತಮ್ಮ ವಚನಗಳ ಮೂಲಕ ಅದ್ಭುತವಾದ ಸಾಮಾಜಿಕ ಕ್ರಾಂತಿ ಮಾಡಿ ಕನ್ನಡ ನಾಡು-ನುಡಿಯನ್ನು ಶ್ರೀಮಂತಗೊಳಿಸಿದ್ದಾರೆ ಎಂದು ವಿಶ್ಲೇಷಿಸಿದ ಅವರು, ಸಾಹಿತ್ಯ, ಸಂಸ್ಕೃತಿ, ಸಂಗೀತ, ಸದಭಿರುಚಿ, ಸಂಪ್ರದಾಯ, ಸಂಸ್ಕಾರ ಸೇರಿದಂತೆ ಯಾವುದೇ ಕ್ಷೇತ್ರದಲ್ಲೂ ಕನ್ನಡಿಗರು ಕಡಿಮೆಯಿಲ್ಲ. ಇಂತಹ ಪವಿತ್ರ ನೆಲದಲ್ಲಿ ಜನಿಸಿದ ನಾವೆಲ್ಲರೂ ಪುಣ್ಯವಂತರು ಎಂದು ಜಿಲ್ಲಾಧಿಕಾರಿ ನುಡಿದರು.

ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಪಸರಿಸುವಲ್ಲಿ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಕಳೆದ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಮಾತಾಡ್ ಮಾತಾಡು ಕನ್ನಡ’, ಹಾಗೆಯೇ ಈ ವರ್ಷ ‘ಕೋಟಿ ಕಂಠ ಗಾಯನ’ ಮೂಲಕ ಕನ್ನಡ ನಾಡಿನಾದ್ಯಂತ ಸಹಸ್ರಾರು ಜನರು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕನ್ನಡತನವನ್ನು ಮೆರೆದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷೆ ಎನ್. ಅನಿತಾ ಪೂವಯ್ಯ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಮತ್ತಿತರರು ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!