ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿರುವ ಮತ್ತೊಂದು ಅಮಾನುಷ ಘಟನೆ ಈಗ ನಾಡಿನಾದ್ಯಂತ ಚರ್ಚೆಗೆ ಕಾರಣವಾಗಿದೆ. ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಕಾಲೇಜು ಅಥವಾ ಕೆಲಸಕ್ಕಾಗಿ ನಗರಕ್ಕೆ ಬರುವ ಸಾವಿರಾರು ಯುವತಿ ಮತ್ತು ಮಹಿಳೆಯರು ಪೇಯಿಂಗ್ ಗೆಸ್ಟ್ (PG) ವ್ಯವಸ್ಥೆಯಲ್ಲಿ ವಾಸಿಸುತ್ತಿದ್ದಾರೆ. ಆದರೆ ಇಂಥ ಸ್ಥಳವೊಂದರಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಶ್ನೆ ಏಳುವ ಘಟನೆ ಇದೀಗ ಬೆಳಕಿಗೆ ಬಂದಿದೆ.
ನಗರದ ಹೊರವಲಯದಲ್ಲಿರುವ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪಿಜಿಯೊಂದರಲ್ಲಿ ಈ ದಾರುಣ ಘಟನೆ ನಡೆದಿದೆ. ಅಶ್ರಫ್ ಎಂಬಾತ ತನ್ನದೇ ಪಿಜಿಯಲ್ಲಿ ವಾಸಿಸುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ಪಿಜಿಗೆ ಸೇರಿ ಕೇವಲ ಹತ್ತು ದಿನವಾದ ಯುವತಿಯನ್ನು ಆರೋಪಿ ಅಶ್ರಫ್ ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಈ ಕೃತ್ಯ ಕಳೆದ ಗುರುವಾರ ರಾತ್ರಿ ನಡೆದಿದೆ ಎನ್ನಲಾಗಿದೆ.
ಘಟನೆ ಬಳಿಕ ತೀವ್ರ ಆತಂಕದಲ್ಲಿದ್ದ ಯುವತಿ ತಾನೇ ಸೋಲದೇವನಹಳ್ಳಿ ಠಾಣೆಗೆ ಭೇಟಿ ನೀಡಿ ದೂರು ನೀಡಿದ್ದಾಳೆ. ತಕ್ಷಣ ಕ್ರಿಯಾಶೀಲಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿ ಪಿಜಿ ಮಾಲೀಕನಾಗಿದ್ದು, ಸ್ಥಳೀಯರು ಮತ್ತು ಪಾಲಕರು ಈ ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.