ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಯುವಕನ ಸಾವು ಪ್ರಕರಣ ಸಾಕಷ್ಟು ಸಂಚಲನ ಮೂಡಿಸಿದೆ. ಇದು ಲಾಕಪ್ ಡೆತ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಮೃತ ಯುವಕನಿಗೆ ಮೂರ್ಛೆ ರೋಗ ಇತ್ತು. ಅದರಿಂದ ಆತ ಮೃತ ಪಟ್ಟಿದ್ದಾನೆ. ಆದರೆ, ಎಫ್ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತಿಗೆ ಸೂಚಿಸಿದ್ದೇನೆ ಎಂದರು. ಆರೋಪಿಗೆ ಪಿಟ್ಸ್ ಬಂದಿತ್ತು, ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದರು.ಆತ ಮೃತಪಟ್ಟಿದ್ದಾನೆ. ತನಿಖೆಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಎಂಬ ವ್ಯಕ್ತಿಯನ್ನು ಒಸಿ ಮಟ್ಕಾ ಆಡಿಸುತ್ತಿದ್ದ ಆರೋಪದಲ್ಲಿ ಶುಕ್ರವಾರ ಪೊಲೀಸರು ಠಾಣೆಗೆ ಕರೆ ತಂದಿದ್ದರು. ಪೊಲೀಸರು ಠಾಣೆಗೆ ಕರೆ ತರುತ್ತಿದ್ದಂತೆ ಆರೋಪಿ ಬಿಪಿ ಲೋ ಆಗಿ ಕುಸಿದು ಬಿದ್ದಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಾಗಿಸಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ. ಇದರಿಂದ ಆಕ್ರೋಶಗೊಂಡ ಮೃತ ಕುಟುಂಬಸ್ಥರು ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದರು. ಇದರಿಂದಾಗಿ ಪೊಲೀಸರಿಗೆ ಗಾಯಗಳಾಗಿತ್ತು. ಠಾಣೆಯಲ್ಲಿ ನಿಲ್ಲಿಸಿದ್ದ ಪೊಲೀಸ್ ವಾಹನಗಳು ಜಖಂ ಆಗಿದ್ದವು.