Saturday, August 30, 2025

ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಬಸ್‌ ಬೆಳಗಾವಿಯಲ್ಲಿ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಳಗಾವಿ ಹೊರವಲಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದುರ್ಮರಣವಾಗಿ, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಈ ದುರ್ಘಟನೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ, ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ಬಡೇಕೊಳ್ಳ ಮಠದ ಘಾಟ್ ಪ್ರದೇಶದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಹುಬ್ಬಳ್ಳಿಯಿಂದ ಪುಣೆಯತ್ತ ಹೊರಟಿದ್ದ ಗೋಗಟೆ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದು, ಇದರಲ್ಲಿ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಉಳಿದವರಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಚಾಲಕನ ಅಜಾಗರೂಕ ಚಾಲನೆ ಈ ಅಪಘಾತಕ್ಕೆ ಪ್ರಮುಖ ಕಾರಣವೆಂದು ಪೊಲೀಸರು ಶಂಕಿಸಿದ್ದಾರೆ. ಬಸ್ ಘಾಟ್ ಪ್ರದೇಶದಲ್ಲಿ ತೀವ್ರ ತಿರುವು ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ನಂತರ ಬಸ್‌ನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಸ್ಥಳೀಯರು ಹಾಗೂ ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣ ರಕ್ಷಣೆ ನಡೆಸಿ ಹೊರತೆಗೆದರು. ಗಾಯಾಳುಗಳನ್ನು ತಕ್ಷಣವೇ ಆಂಬುಲೆನ್ಸ್‌ನಲ್ಲಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಈ ಘಟನೆ ಸಂಬಂಧ ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಈಗಾಗಲೇ ಬಸ್ ಚಾಲಕನ ವಿರುದ್ಧ ತನಿಖೆ ಪ್ರಾರಂಭಿಸಿದ್ದು, ಅಜಾಗರೂಕ ಚಾಲನೆ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ತೋರಿದ ತುರ್ತು ಸ್ಪಂದನೆ, ಬಸ್‌ನಲ್ಲಿದ್ದ ಒಂಬತ್ತು ಮಂದಿಯ ಜೀವ ಉಳಿಸಲು ಕಾರಣವಾಗಿದೆ. ಗ್ರಾಮಸ್ಥರು ಹಾಗೂ ಪೊಲೀಸ್ ಸಿಬ್ಬಂದಿ ತಕ್ಷಣದ ಕಾರ್ಯಾಚರಣೆಯಿಂದ ಅನೇಕರು ಪಾರಾಗಿದ್ದಾರೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.

ಇದನ್ನೂ ಓದಿ